Siddaramaih | ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವೆ ಕ್ಷಿಪಣಿ ಸಮರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಯುದ್ಧಪೀಡಿತ ರಾಷ್ಟ್ರಗಳಲ್ಲಿ ನೆಲೆಸಿರುವ ಸಾವಿರಾರು ಕನ್ನಡಿಗರ ಸುರಕ್ಷತೆಯನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ವಿದೇಶದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಪೋಸ್ಟ್
ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ನಮ್ಮ ಜನರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡುತ್ತೇನೆ.
ನಾಳೆಯೇ ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ.
ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ.
ಬಳ್ಳಾರಿ ಮೂಲದ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಪೋಸ್ಟ್ ಮಾಡಿದ್ದಾರೆ.