ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ (ಆರ್ಟಿಐ) ಸಲ್ಲಿಕೆಯಾಗುವ ಅರ್ಜಿಗಳ ವಿಚಾರಣೆಗೆ ಮೇಲ್ಮನವಿ ಪ್ರಾಧಿಕಾರಗಳಲ್ಲಿ ಆನ್ಲೈನ್ ವ್ಯವಸ್ಥೆಯನ್ನು ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರಿನ ಕೆ.ಎನ್. ಪ್ರಣವ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಆನ್ಲೈನ್ ವಿಚಾರಣೆಯ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆಡಳಿತಾತ್ಮಕ ನಿರ್ಧಾರಕ್ಕೆ ಸಂಬಂಧಿಸಿದೆ ಎಂದು ಸ್ಪಷ್ಟಪಡಿಸಿದೆ.
ಸ್ವತಃ ವಾದ ಮಂಡಿಸಿದ್ದ ಅರ್ಜಿದಾರರು, ಆನ್ಲೈನ್ ವಿಚಾರಣೆಯ ಹಕ್ಕು ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿರುವ ಮೂಲಭೂತ ಹಕ್ಕಾಗಿದೆ ಎಂದು ತಮ್ಮ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ಆದೇಶವೊಂದನ್ನು ಆಧರಿಸಿ ಸಮರ್ಥಿಸಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸೌಲಭ್ಯಗಳ ಲಭ್ಯತೆ ಇದ್ದಾಗ ಮಾತ್ರ ಈ ತತ್ವ ಅನ್ವಯಿಸುತ್ತದೆ. ಪ್ರತಿಯೊಂದು ಇಲಾಖೆಯಲ್ಲೂ ಈ ಸೌಲಭ್ಯ ಒದಗಿಸಲು ಸಾವಿರ ಕೋಟಿ ರೂಪಾಯಿ ಬೇಕಾಗಬಹುದು. ಅದನ್ನು ಯಾರು ಕೊಡುತ್ತಾರೆ ಎಂದು ಪ್ರಶ್ನಿಸಿತು.
ಸರ್ಕಾರದ ಪರ ವಾದಿಸಿದ ವಕೀಲರು, ಎಲ್ಲ ಕಡೆಗಳಲ್ಲಿ ಆನ್ಲೈನ್ ವ್ಯವಸ್ಥೆ ಜಾರಿಗೆ ತರಲು ಭಾರಿ ಹೂಡಿಕೆಯ ಅಗತ್ಯವಿದೆ. ಇದು ಕಾರ್ಯಸಾಧ್ಯವಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನು ಪರಿಗಣಿಸಿರುವ ನ್ಯಾಯಪೀಠ, ಆನ್ಲೈನ್ ವಿಚಾರಣೆಗೆ ಒತ್ತು ನೀಡಲು ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆಯಾದರೂ, ಅದನ್ನು ಕಡ್ಡಾಯ ಮಾಡಿಲ್ಲ. ಇದು ರಾಜ್ಯ ಸರ್ಕಾರ ಮತ್ತು ಮೇಲ್ಮನವಿ ಪ್ರಾಧಿಕಾರಗಳ ಆಡಳಿತಾತ್ಮಕ ನಿರ್ಧಾಕ್ಕೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿದೆ.
ಏನಿದು ಪ್ರಕರಣ?
ಅರ್ಜಿದಾರರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್ಎಲ್ಯು) ಆರ್ಟಿಐ ಅರ್ಜಿಯೊಂದನ್ನು ಸಲ್ಲಿಸಿದ್ದರು. ಅದಕ್ಕೆ ಸಾರ್ವಜನಿಕ ಮಾಹಿತಿ ಅಧಿಕಾರಿ ನೀಡಿದ್ದ ಉತ್ತರದಿಂದ ತೃಪ್ತಿಹೊಂದದ ಅವರು ವಿವಿಯ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ ಆನ್ಲೈನ್ ಮೂಲಕ ವಿಚಾರಣೆಗೆ ಕೋರಿದ್ದರು. ಈ ಮನವಿಯನ್ನು ತಿರಸ್ಕರಿಸಿದ್ದ ಪ್ರಾಧಿಕಾರವು ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಅರ್ಜಿದಾರರಿಗೆ 2025ರ ನ. 25ರಂದು ತಿಳಿಸಿತ್ತು. ಈ ಕ್ರಮವನ್ನು ರದ್ದುಪಡಿಸಿ ಅನ್ಲೈನ್ ವಿಚಾರಣೆಗೆ ಅವಕಾಶ ಕಲ್ಪಿಸಲು ವಿವಿಗೆ ಮತ್ತು ರಾಜ್ಯದ ಎಲ್ಲ ಆರ್ಟಿಐ ಮೇಲ್ಮನವಿ ಪ್ರಾಧಿಕಾರಗಳಲ್ಲಿ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.