Karnataka Budget 2026-27 | ತೋಟಗಾರಿಕೆಗೆ ಹೈ-ವೋಲ್ಟೇಜ್ ಬೂಸ್ಟ್
Karnataka Budget 2026-27: ರಾಜ್ಯದ ಬೆನ್ನೆಲುಬಾಗಿರುವ ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ಸಿದ್ದರಾಮಯ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ತೋಟಗಾರಿಕಾ ಕ್ಷೇತ್ರಕ್ಕೆ ಹೊಸ ಆಯಾಮ ನೀಡಿದ್ದು, ತೋಟಗಾರಿಕೆಯನ್ನು ರೈತರ ಆದಾಯ ವೃದ್ಧಿಯ ಪ್ರಮುಖ ಇಂಜಿನ್ ಆಗಿ ರೂಪಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿ ಎಂದು ಸಿಎಂ ಘೋಷಿಸಿದ್ದಾರೆ.
ನಮ್ಮ ಸರ್ಕಾರವು ಉತ್ಕೃಷ್ಟ ಗುಣಮಟ್ಟ, ಅಧಿಕ ಮೌಲ್ಯದ, ಹವಾಮಾನ ಸ್ಥಿತಿ-ಸ್ಥಾಪಕ ಮತ್ತು ಮಾರುಕಟ್ಟೆ ಆಧಾರಿತ ತೋಟಗಾರಿಕೆ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ತೋಟಗಾರಿಕೆ ಬೆಳೆಗಳ ಅಭಿವೃದ್ಧಿಗಾಗಿ ಸರ್ಕಾರ ಈ ಕೆಳಕಂಡ ಕ್ರಮಗಳನ್ನು ಕೈಗೊಂಡಿದೆ.
- ಹೊಸದಾಗಿ 89,000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೇಸಾಯ ಅಳವಡಿಕೆ.
- 2.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ಅಳವಡಿಸಿ 2.36 ಲಕ್ಷ ರೈತರಿಗೆ ಅನುಕೂಲ.
- ಬೆಳೆ ವಿಮೆ ಯೋಜನೆಯಡಿ 11 ಲಕ್ಷ ರೈತರಿಗೆ 2,378 ಕೋಟಿ ರೂ.ಗಳ ಬೆಳೆ ವಿಮೆ ಪರಿಹಾರ.
- 21,360 ಫಲಾನುಭವಿಗಳಿಗೆ 9,800 ಕೊಯ್ಲೋತ್ತರ ಘಟಕಗಳ ನಿರ್ಮಾಣ.
1. ತೋಟಗಾರಿಕೆ ಇಲಾಖೆಯ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಜಮೀನನ್ನು ಉಪಯೋಗಿಸಿ ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು ಪಿಪಿಪಿ (Public-Private Partnership) ಮಾದರಿಯಲ್ಲಿ ಸ್ಥಾಪಿಸಲಾಗುವುದು.
2. ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಸಮುದಾಯ ಆಧಾರಿತ ರೋಗ–ಕೀಟ ನಿಯಂತ್ರಣ ಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
3. ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು (Cold Storage) 64 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಎಲ್ಲಾ ಕೃಷಿ ಮಾರುಕಟ್ಟೆಗಳಲ್ಲಿ ಶೀತಲಗೃಹಗಳನ್ನು (Cold Storage) ಹಂತ ಹಂತವಾಗಿ ನಿರ್ಮಿಸಲಾಗುವುದು.
4. ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.
5. ನೀರಿನ ಸಂರಕ್ಷಣೆ ಮತ್ತು ಮಣ್ಣಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಹೈಡ್ರೋಪೊನಿಕ್ಸ್ (Hydroponics) ಹಾಗೂ ಕೋಕೋಪೀಟ್ (Coco peat) ಆಧಾರಿತ ಮಣ್ಣಿಲ್ಲದ ಕೃಷಿಯನ್ನು ಪ್ರೋತ್ಸಾಹಿಸಲಾಗುವುದು.
6. ತಜ್ಞರ ಕಾರ್ಯಸಾಧ್ಯತಾ ವರದಿಯ ಶಿಫಾರಸ್ಸಿನಂತೆ ಡಂಬಳದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲು ಅಗತ್ಯವಿರುವ ಪ್ರಥಮ ಹಂತದ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಸಿಎಂ ದಾಖಲೆ ಬಜೆಟ್
ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ (2026-27 ಸಾಲಿನ ರಾಜ್ಯ ಆಯವ್ಯಯ) ಕರ್ನಾಟಕ ಇತಿಹಾಸದಲ್ಲಿ ಒಂದು ಮಹತ್ವದ ಮೈಲುಗಲ್ಲಾಗಿದೆ. ಏಕೆಂದರೆ, ಯಾವುದೇ ಮುಖ್ಯಮಂತ್ರಿ ಇಷ್ಟೊಂದು ಬಾರಿ ಬಜೆಟ್ ಮಂಡಿಸಿಲ್ಲ. ಸುಮಾರು 4.48 ಲಕ್ಷ ಕೋಟಿ ಗಾತ್ರದ ಈ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ (ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ) ಮುಖ್ಯ ಆದ್ಯತೆ ನೀಡಲಾಗಿದ್ದು, ಆದಾಯ ಕೊರತೆ, ಜಿಎಸ್‌ಟಿ ಸುಧಾರಣೆಯಿಂದ ಉಂಟಾದ ನಷ್ಟ ಮತ್ತು ಹೆಚ್ಚುತ್ತಿರುವ ಖರ್ಚುಗಳ ನಡುವೆಯೂ ಮಹಿಳೆಯರು, ರೈತರು, ಯುವಕರು, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ (ವಿಶೇಷವಾಗಿ ಬೆಂಗಳೂರು ಮತ್ತು ಹಿಂದುಳಿದ ಪ್ರದೇಶಗಳು) ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ.