ಇಂಡಿ ತಾಲೂಕಿನ ಹಿರೇಮಸಳಿ ರಸ್ತೆ ಹಾಳಾಗಿರುವುದು. 
ರಾಜ್ಯ

ಹಿರೇಮಸಳಿ ರಸ್ತೆ ಅಭಿವೃದ್ಧಿಗೆ ಅಸ್ತು

ಮಾರುತಿ ತಳ್ಳಳ್ಳಿ

ಪ್ರಮುಖ ಮುಖ್ಯಾಂಶಗಳು

  • ಶಾಸಕರ ಪರಿಶ್ರಮ ಸಫಲ
  • ಹದಗೆಟ್ಟ ಮಾರ್ಗಕ್ಕೆ ಸುಧಾರಣೆ ಭಾಗ್ಯ
ವಿಜಯಪುರ: ಸಂಪೂರ್ಣ ಕಿತ್ತು ಹೋದ ಡಾಂಬರು, ಅಲ್ಲಲ್ಲಿ ತಗ್ಗು-ದಿನ್ನೆಗಳಿಂದ ಆವೃತವಾಗಿ ಸುಗಮ ಸಂಚಾರಕ್ಕೆ ಸಂಚಕಾರ ಉಂಟು ಮಾಡಿದ್ದ ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದ ರಸ್ತೆ ಅಭಿವೃದ್ಧಿಗೆ ಸರ್ಕಾರ ಅಸ್ತು ಎಂದಿದೆ.
ಕಳೆದ ಹಲವು ತಿಂಗಳುಗಳಿಂದ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಗ್ರಾಮಸ್ಥರು ಒತ್ತಾಯಿಸುತ್ತಾ ಬಂದಿದ್ದರು. ಶಾಸಕ ಯಶವಂತರಾಯಗೌಡ ಪಾಟೀಲರು ಸಹ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಿದ್ದರು.
ಇದೀಗ ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಗೊಳ್ಳುವ ಆಶಾಭಾವ ಮನೆ ಮಾಡಿದೆ.
ರೂಗಿ ಕ್ರಾಸ್‌ನಿಂದ ಹಿರೇಮಸಳಿಯ ಕಿಮೀ 5.00 ದಿಂದ 9.50ರವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಂದಾಜು 400 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಈಗಾಗಲೇ ಅನುದಾನ ಕೂಡ ಬಿಡುಗಡೆಯಾಗಿದೆ. ಇದರಿಂದ ಗ್ರಾಮಸ್ಥರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ.
ಇನ್ನುಳಿದ ರಸ್ತೆ ಅಭಿವೃದ್ಧಿ ಕಾಮಗಾರಿ ಸಹ ಕೈಗೆತ್ತಿಕೊಳ್ಳಲಾಗುತ್ತಿದೆ. ಜೊತೆಗೆ ತಾಂಬಾ-ಹಿರೇಮಸಳಿ ರಸ್ತೆ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ. ಶೀಘ್ರದಲ್ಲೇ ರಸ್ತೆಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳುವ ನಿರೀಕ್ಷೆ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಜೊತೆಗೆ ಗ್ರಾಮದ ವಿವಿಧ ಸಮುದಾಯ ಭವನಗಳ ನಿರ್ಮಾಣಕ್ಕೂ ಶಾಸಕರು ಈಗಾಗಲೇ ಕ್ರಿಯಾಯೋಜನೆ ಸಿದ್ಧಪಡಿಸಿದ್ದು, ಬರುವ ದಿನಗಳಲ್ಲಿ ಗ್ರಾಮಸ್ಥರ ಹಲವು ಬೇಡಿಕೆಗಳಿಗೆ ಮನ್ನಣೆ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ‘ವಿಜಯವಾಣಿ’ಗೆ ತಿಳಿಸಿದ್ದಾರೆ.