ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ(accident) ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರನ್ನು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25) ಹಾಗೂ ರಮೇಶ್ ಬಳ್ಳಾರಿ (45) ,ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಎಂದು ಗುರುತಿಸಲಾಗಿದೆ.
ಡಿವೈಡರ್ ದಾಟಿ ಬಂದ ಲಾರಿ
ಮೃತರು ಹಾಗೂ ಇತರರು ಓಮಿನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಇದೇ ವೇಳೆ ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನ ರಸ್ತೆಗೆ ಬಂದು ಓಮಿನಿ ವಾಹನಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಓಮಿನಿ ವಾಹನ ಸಂಪೂರ್ಣ ಜಖಂಗೊಂಡಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಬ್ಬರ ಸ್ಥಿತಿ ಗಂಭೀರ
ಅಪಘಾತದಲ್ಲಿ ಗಾಯಗೊಂಡ ಹಲವು ಮಂದಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ.
ಪ್ರಕರಣ ದಾಖಲು
ಘಟನಾ ಸ್ಥಳಕ್ಕೆ ಕುಕನೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.