ಬೆಟ್ಟದಪುರ ಸಮೀಪದ ದೊಡ್ಡಕಮರವಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ ಎಚ್‌ಪಿವಿ ಲಸಿಕೆ ಕುರಿತು ಆರೋಗ್ಯ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಪೂಜಾ ಮಾತನಾಡಿದರು. ಲತಾ, ಮಹದೇವ್, ಮೂರ್ತಿ, ನಾಜಿಮ, ನಂದಿನಿ ಇತರರಿದ್ದರು. 
ರಾಜ್ಯ

ಎಚ್‌ಪಿವಿ ಲಸಿಕೆಯಿಂದ ಗರ್ಭಕಂಠದ ಕ್ಯಾನ್ಸರ್ ತಡೆ ಸಾಧ್ಯ

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ದೊಡ್ಡಕಮರವಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಣಗಾಲು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ವಿದ್ಯಾರ್ಥಿನಿಯರಿಗೆ ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮಾ ವೈರಸ್) ಲಸಿಕೆ ಕುರಿತು ಆರೋಗ್ಯ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಆರೋಗ್ಯಾಧಿಕಾರಿ ಡಾ.ಪೂಜಾ ಮಾತನಾಡಿ, ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಗಳಲ್ಲಿ ಒಂದಾಗಿದೆ. ಎಚ್‌ಪಿವಿ ವೈರಸ್ ಸೋಂಕು ಇದಕ್ಕೆ ಪ್ರಮುಖ ಕಾರಣವಾಗಿದ್ದು, 9 ರಿಂದ 14 ವರ್ಷದೊಳಗಿನ ಬಾಲಕಿಯರು ಸರಿಯಾದ ಸಮಯದಲ್ಲಿ ಎಚ್‌ಪಿವಿ ಲಸಿಕೆ ಪಡೆದರೆ ಭವಿಷ್ಯದಲ್ಲಿ ಗರ್ಭಕಂಠದ ಕ್ಯಾನ್ಸರ್‌ನ ಅಪಾಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಈ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು, ಸರ್ಕಾರದಿಂದ ಉಚಿತವಾಗಿ ನೀಡಲಾಗುತ್ತಿದೆ. ಪಾಲಕರು ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಲತಾ ಮಾತನಾಡಿ, ಆರೋಗ್ಯಕರ ಜೀವನಶೈಲಿ, ವೈಯಕ್ತಿಕ ಸ್ವಚ್ಛತೆ ಹಾಗೂ ಹದಿಹರೆಯದ ಆರೋಗ್ಯದ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿವು ಹೊಂದಬೇಕು. ಗರ್ಭಕಂಠದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದರ ಜತೆಗೆ ಎಚ್‌ಪಿವಿ ಲಸಿಕೆಯ ಮಹತ್ವವನ್ನು ಎಲ್ಲರೂ ತಿಳಿದುಕೊಂಡು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ ಮಹದೇವ್, ಶಿಕ್ಷಕರಾದ ಮೂರ್ತಿ, ನಾಜಿಮ, ನಂದಿನಿ, ಅನಿತಾ, ಸುನೀತಾ, ಸತೀಶ್ ಬಾಬು, ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸವಿತಾ, ಸಮುದಾಯ ಆರೋಗ್ಯಾಧಿಕಾರಿ ಧರ್ಮೇಶ್, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.