ಹನೂರಿನಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಗೌಡಳ್ಳಿ ಸೋಮಣ್ಣ ಅಧ್ಯಕ್ಷತೆಯಲ್ಲಿ ರೈತ ಮುಖಂಡರ ಸಭೆ ಆಯೋಜಿಸಲಾಗಿತ್ತು. ಬಸವರಾಜು, ಪವನ್‌ಕುಮಾರ್, ಮಹದೇವಪ್ರಭು ಇತರರಿದ್ದರು.
- ಕೆರೆಕಟ್ಟೆಗಳಿಗೆ ನೀರು ತುಂಬಿಸುವುದು ಸೇರಿದಂತೆ ಇತರ ಬೇಡಿಕೆ
- ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಗೌಡಳ್ಳಿ ಸೋಮಣ್ಣ
ಹನೂರು: ತಾಲೂಕಿನ ಕೆರೆಕಟ್ಟೆಗಳಿಗೆ ನೀರು ತುಂಬಿಸುವುದು ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಗೌಡಳ್ಳಿ ಸೋಮಣ್ಣ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿಗೃಹದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ರೈತ ಮುಖಂಡರ ಕುಂದುಕೊರತೆ ಸಭೆಯಲ್ಲಿ ಸಮಸ್ಯೆ ಆಲಿಸಿ ಮಾತನಾಡಿದರು.
ಸರ್ಕಾರ ವಿದ್ಯುತ್ ವಲಯವನ್ನು ಖಾಸಗೀಕರಣ ಮಾಡಲು ಹೊರಟಿರುವುದು ನಿಜಕ್ಕೂ ಖಂಡನೀಯ. ಇದರಿಂದ ರೈತರು ತೊಂದರೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ವಿದ್ಯುತ್ ಖಾಸಗೀಕರಣವನ್ನು ಹಿಂಪಡೆಯಬೇಕು. ಇನ್ನು ತಾಲೂಕಿನಲ್ಲಿ ಸಮರ್ಪಕ ಮಳೆಯಾಗದ ಪರಿಣಾಮ ಕೆರೆ ಕಟ್ಟೆಗಳು ಬತ್ತಿ ಹೋಗಿವೆ. ಅಂತರ್ಜಲ ಮಟ್ಟ ಕುಸಿದಿದ್ದು, ಕೃಷಿಗೆ ಹಿನ್ನಡೆಯಾಗಿದೆ. ಜಾನುವಾರುಗಳಿಗೆ ಕುಡಿವ ನೀರಿನ ಸಮಸ್ಯೆ ಎದುರಾಗಿದೆ. ಆದ್ದರಿಂದ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಕೆಲಸವಾಗಬೇಕಿದೆ ಎಂದರು.
ಹದಗೆಟ್ಟ ರಸ್ತೆಯಿಂದಾಗಿ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಪಿ.ಜಿ ಪಾಳ್ಯ ಗ್ರಾಪಂನಲ್ಲಿ ಇ ಸ್ವತ್ತು ನೀಡಲು ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದು, ಜನರು ಕಚೇರಿಗೆ ಅಲೆಯುವಂತಾಗಿದೆ. ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿಲ್ಲ. ಹಾಗಾಗಿ ಸದ್ಯದಲ್ಲಿಯೇ ದಿನಾಂಕಪಡಿಸಿ ಕೈಗೊಳ್ಳುವ ಪ್ರತಿಭಟನೆಗೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಇದಕ್ಕೂ ಮುನ್ನ ಲಿಂಗೈಕ್ಯ ಮುಮ್ಮಡಿ ನಿರ್ವಾಣ ಸ್ವಾಮೀಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜು, ಕಾರ್ಯದರ್ಶಿ ಪವನ್‌ಕುಮಾರ್, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವಪ್ರಭು, ಉಪಾಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಮುಖಂಡರಾದ ಪ್ರಭುಸ್ವಾಮಿ, ಪುಟ್ಟಸ್ವಾಮಿ, ಮಂಟೇಸ್ವಾಮಿ, ಕುಮಾರ್ ಇತರರು ಇದ್ದರು.