ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ (Karnataka Rains) ಕಣ್ಮರೆಯಾಗುತ್ತಿರುವ ನಡುವೆಯೇ ಹವಾಮಾನದಲ್ಲಿ ಮತ್ತಷ್ಟು ಬದಲಾವಣೆಗಳು ಕಂಡುಬಂದಿದ್ದು, ಬಂಗಾಳಕೊಲ್ಲಿಯ ಥೈಲ್ಯಾಂಡ್ ಮತ್ತು ಮ್ಯಾನ್ಮಾರ್ ಕರಾವಳಿ ಭಾಗದಲ್ಲಿ ನಿರ್ಮಾಣವಾಗಿದ್ದ ವಾಯುಭಾರ ಕುಸಿತ ಈಗಾಗಲೇ ತಗ್ಗಿದೆ. ಆದರೆ, ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯದತ್ತ ತೇವಾಂಶಭರಿತ ಗಾಳಿ ಬೀಸುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಸೃಷ್ಟಿಯಾಗಿದ್ದು, ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ವರುಣನ ಅಬ್ಬರ ಜೋರಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗಲು ವೇಳೆ ಬಿಸಿಲು ಮತ್ತು ಸೆಕೆಯ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪೂರ್ವದ ಗಾಳಿಯ ಪ್ರಭಾವ ಹೆಚ್ಚಾದರೆ ಕೆಲವೆಡೆ ತುಂತುರು ಮಳೆಯೂ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಹಾಸನ, ಮೈಸೂರು, ಚಿಕ್ಕಮಗಳೂರು, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಸೇರಿ ಒಟ್ಟು ಆರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಗಳ ಬೆನ್ನಲ್ಲೇ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ವರದಿ ಪ್ರಕಾರ, ಕರಾವಳಿ ಭಾಗದಲ್ಲಿ ಮುಂದಿನ 10 ದಿನಗಳವರೆಗೆ ಮಳೆಯ ವಾತಾವರಣ ಹೀಗೆ ಮುಂದುವರಿಯುವ ಸಾಧ್ಯತೆಯಿದೆ. ಕೊಡಗು, ಸಕಲೇಶಪುರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆಗಳಿವೆ.
ಉತ್ತರ ಒಳನಾಡಿನ ಹಾವೇರಿ, ಧಾರವಾಡ ಹಾಗೂ ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ. ಸೆ.29ರಂದು ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳ ಗಡಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡು, ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಆಕ್ಟೋಬರ್ 6 ರವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಒಟ್ಟಿನಲ್ಲಿ, ಮುಂಗಾರು ಹಿಂತಿರುಗುವ ಹಂತದಲ್ಲಿದ್ದರೂ ತೇವಾಂಶಭರಿತ ಗಾಳಿಯ ಪ್ರಭಾವದಿಂದ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಇನ್ನೂ ಮಳೆಯ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ,(ಏಜೆನ್ಸೀಸ್).