ಬಸವ ಸಮಿತಿಯಲ್ಲಿ ನಡೆದ ಲಿಂಗಾಯತ ಮಠಾಧಿಪತಿಗಳ ಚಿಂತನ-ಮಂಥನದಲ್ಲಿ ಆನಂದಪುರ ಮರುಘಾಮಠ, ಗದಗ ತೋಂಟದಾರ್ಯ ಮಠ, ಸಿದ್ದಗಂಗಾ, ಭಾಲ್ಕಿ ಮತ್ತಿತರ ಮಠಾಧೀಶರು ಪಾಲ್ಗೊಂಡಿದ್ದರು.  
ರಾಜ್ಯ

ಬಸವಾದಿ ಶರಣರ ವಿರುದ್ಧದ ದಾಳಿ ನಿಲ್ಲದಿದ್ದರೆ ಉಗ್ರ ಹೋರಾಟ

ಲಿಂಗಾಯತ ಮಠಾಧಿಪತಿಗಳ ಚಿಂತನ ಮಂಥನ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ಶರಣ ಸಂಸ್ಕೃತಿಯ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಯನ್ನು ತಕ್ಷಣ ನಿಲ್ಲಿಸಬೇಕು. ಇಂತಹ ಕೃತ್ಯಗಳು ಮುಂದುವರಿದರೆ ಇಡೀ ಕನ್ನಡ ನಾಡಿನ ಜನತೆ ಒಗ್ಗಟ್ಟಾಗಿ ಬೀದಿಗಿಳಿದು ಉಗ್ರ ಹೋರಾಟ ಮಾಡಲಿದ್ದಾರೆ ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಬಸವ ವಿರೋಧಿ ಶಕ್ತಿಗಳಿಗೆ ಎಚ್ಚರಿಕೆ ನೀಡಿದೆ.

ಬಸವ ಸಮಿತಿಯ ಬಸವ ಭವನದಲ್ಲಿ ಬುಧವಾರ ಆಯೋಜಿಸಿದ್ದ ‘ಇವ ನಮ್ಮವ ಚಿಂತನ ಮಂಥನ’ ಕಾರ್ಯಕ್ರಮದಲ್ಲಿ ಈ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ಮಾಜಿ ಮೇಯರ್ ಡಾ. ಗಂಗಾಂಬಿಕೆ ಮಲ್ಲಿಕಾರ್ಜುನ ನಿರ್ಣಯ ಮಂಡಿಸಿದರು. ಅದನ್ನು ಸರ್ವಾನುಮತದಿಂದ ಎಲ್ಲ ಸ್ವಾಮೀಜಿಗಳು, ಚಿಂತಕರು, ಸಾಹಿತಿಗಳು ಅನುಮೋದಿಸಿದರು. ಬಸವಣ್ಣನವರ ವ್ಯಕ್ತಿತ್ವ, ವಿಚಾರಧಾರೆ, ಸಾಮಾಜಿಕ ಸುಧಾರಣೆ ಹಾಗೂ ಬಸವಾದಿ ಶರಣರ ವಚನ ಸಾಹಿತ್ಯದ ಮಹತ್ವವನ್ನು ಸಾರುವ ಉದ್ದೇಶದಿಂದ ನಡೆದ ಈ ಸಭೆಯಲ್ಲಿ ವಿವಿಧ ಮಠಗಳ ಮಠಾಧೀಶರು, ಚಿಂತಕರು, ಸಾಹಿತಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು. ಬಸವಣ್ಣನವರು ಪ್ರತಿಪಾದಿಸಿದ ಸಮಾನತೆ, ಕಾಯಕ, ದಾಸೋಹ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳು ಕನ್ನಡ ನಾಡಿನ ಸಾಂಸ್ಕೃತಿಕ ಅಸ್ಮಿತೆಯ ಭಾಗವಾಗಿವೆ. ಇಂತಹ ಮೌಲ್ಯಗಳ ಮೇಲೆ ನಡೆಯುವ ದಾಳಿಯನ್ನು ಸಮಾಜದ ಎಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕೆಂಬ ಆಶಯ ಸಭೆಯಲ್ಲಿ ವ್ಯಕ್ತವಾಯಿತು.

ಬಸವಣ್ಣನವರ ವಿಚಾರಧಾರೆಯನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ, ನಾಡಿನ ಸಾಂಸ್ಕೃತಿಕ ಮತ್ತು ಸಾಮಾಜಿಕ ಪರಂಪರೆಯ ಭಾಗವಾಗಿ ಕಾಣಬೇಕು. ಶರಣರ ವಚನಗಳಲ್ಲಿರುವ ಮಾನವೀಯ ಮೌಲ್ಯಗಳು ಸಮಾಜಕ್ಕೆ ದಾರಿದೀಪವಾಗಿವೆ. ಅವುಗಳ ರಕ್ಷಣೆಗೆ ಒಗ್ಗಟ್ಟಿನಿಂದ ನಿಲ್ಲಬೇಕೆಂಬ ಸಂದೇಶದೊಂದಿಗೆ ಸಭೆ ಸರ್ವಾನುಮತದ ನಿರ್ಣಯ ಕೈಗೊಂಡಿತು.

ಸಿದ್ದಗಂಗಾ ಮಠದ ಶ್ರೀಸಿದ್ದಲಿಂಗ ಸ್ವಾಮೀಜಿ, ಗದಗದ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ದರಾಮ ಸ್ವಾಮೀಜಿ, ಭೇಲಿಮಠದ ಶ್ರೀ ಶಿವರುದ್ರ ಸ್ವಾಮೀಜಿ, ಆನಂದಪುರ ಮುರುಘಾಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಭಾಲ್ಕಿ ಮಠದ ಬಸವಲಿಂಗ ಪಟ್ಟದ್ದೇವರು, ಕನಕಪುರ ದೇಗುಲ ಮಠದ ಶ್ರೀಚನ್ನಬಸವ ಸ್ವಾಮೀಜಿ ಸೇರಿದಂತೆ 50ಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಂಡಿದ್ದರು.

ಬಸವ ಸಮಿತಿಯಲ್ಲಿ ನಡೆದ ಚಿಂತನ-ಮಂಥನ ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಮಠಾಧೀಶರು ಮತ್ತು ಸಮಾಜದ ಗಣ್ಯರು

ಮಾಜಿ ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.