ವಿಧಾನಸೌಧ 
ರಾಜ್ಯ

ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶ: ವರದಿ ಕೇಳಿದ ಸರ್ಕಾರ

ಪ್ರಮುಖ ಮುಖ್ಯಾಂಶಗಳು

  • ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕೆಪಿಎಸ್‌ಸಿ ಕಾರ್ಯದರ್ಶಿ ಅವರಿಗೆ ವರದಿ ನೀಡುವಂತೆ ನಿರ್ದೇಶನ
  • ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದ್ದೇವೆ. ಆಂತರಿಕವಾಗಿಯೂ ಪರಿಶೀಲನೆ ನಡೆಸಲಿದ್ದೇವೆ
  • ಇದರಲ್ಲಿ 10 ರಿಂದ 12 ಅಭ್ಯರ್ಥಿಗಳು ಆಯ್ಕೆ ಸಾಮಾನ್ಯವಾಗಿರುತ್ತದೆ. ಹಾಗೆಂದ ಮಾತ್ರಕ್ಕೆ ಆರೋಪ ಮಾಡುವುದು ಸರಿಯಲ್ಲ
ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ಸ್‌ (ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳು) 2023-24ನೇ ಸಾಲಿನ ಮುಖ್ಯ ಪರೀಕ್ಷೆಯ ಫಲಿತಾಂಶದಲ್ಲಿ ಗೋಲ್‌ಮಾಲ್ ನಡೆದಿದೆ ಎಂದು ಅಭ್ಯರ್ಥಿಗಳು ಗಂಭೀರ ಆರೋಪ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರವು ವರದಿ ನೀಡುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಸೂಚನೆ ನೀಡಿದೆ.
ಒಂದೇ ಬ್ಲಾಕ್‌ನ ಹತ್ತಾರು ಅಭ್ಯರ್ಥಿಗಳು ರ‌್ಯಾಂಕ್ ಪಡೆದಿರುವುದು ಅನುಮಾನಕ್ಕೆ ಕಾರಣವಾಗಿದೆ. ಇದೆಲ್ಲೇ ಹೇಗೆ ಸಾಧ್ಯ? ಈ ಲಿತಾಂಶವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸಿದ್ದಾರೆ. ಈ ಕಾರಣದಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕೆಪಿಎಸ್‌ಸಿ ಕಾರ್ಯದರ್ಶಿ ಅವರಿಗೆ ವರದಿ ನೀಡುವಂತೆ ನಿರ್ದೇಶನ ನೀಡಿದ್ದಾರೆಂದು ತಿಳಿದು ಬಂದಿದೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೆಪಿಎಸ್‌ಸಿ ಕಾರ್ಯದರ್ಶಿ ಜ್ಯೋತಿ, ಕೆಎಎಸ್ ಮುಖ್ಯ ಪರೀಕ್ಷೆಯ ಫಲಿತಾಂಶದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ಲಿತಾಂಶ ಬಿಡುಗಡೆ ಮಾಡಲಾಗಿದೆ. ಆಧಾರರಹಿತವಾಗಿ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಕೇಳಿದ್ದಾರೆ. ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದ್ದೇವೆ. ಆಂತರಿಕವಾಗಿಯೂ ಪರಿಶೀಲನೆ ನಡೆಸಲಿದ್ದೇವೆ. ಸುಮಾರು 5,700ಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಂದು ಕೊಠಡಿಯಲ್ಲಿ 24 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ, ಇದರಲ್ಲಿ 10 ರಿಂದ 12 ಅಭ್ಯರ್ಥಿಗಳು ಆಯ್ಕೆ ಸಾಮಾನ್ಯವಾಗಿರುತ್ತದೆ. ಹಾಗೆಂದ ಮಾತ್ರಕ್ಕೆ ಆರೋಪ ಮಾಡುವುದು ಸರಿಯಲ್ಲ ಎಂದು ಸಮರ್ಥನೆ ನೀಡಿದ್ದಾರೆ.