ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸೂಚನೆ ಮೇರೆಗೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಜತೆಗೆ ಈ ಹಿಂದೆ ನಡೆದ ವಿವಿಧ ನಾಲ್ಕು ನೇಮಕಾತಿ ಪರೀಕ್ಷೆಗಳಲ್ಲೂ ಅಕ್ರಮಗಳು ನಡೆದಿರುವ ಬಗ್ಗೆ ತನಿಖೆ ನಡೆಸುವಮತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ಸಲ್ಲಿಸಿದ್ದಾರೆ.
ಕೆಪಿಎಸ್ಸಿ ಹಗರಣ ಪ್ರಕರಣ ಕುರಿತು ಇ.ಡಿ ಅಧಿಕಾರಿಗಳು ಇತ್ತೀಚೆಗೆ ಹೈಕೋರ್ಟ್ಗೆ ತನಿಖಾ ವರದಿ ಸಲ್ಲಿಸಿದರು. ತನಿಖೆಯ ವೇಳೆ ಕೆಪಿಎಸ್ಸಿ ನಡೆಸಿದ್ದ ಇತರೆ ನಾಲ್ಕು ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿರುವುದು ಕಂಡು ಬಂದಿದ್ದು ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ)ಕ್ಕೆ ವರ್ಗಾಹಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು.
ಈ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ವಿಧಾನಸೌಧ ಠಾಣೆಗೆ ಗುರುವಾರ ದೂರು ಸಲ್ಲಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ಗಳ (ಎಇಇ) ನೇಮಕಾತಿ, 2023ರಲ್ಲಿ ನಡೆದ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ, 2016 ರ ಮೋಟಾರು ವಾಹನ ನಿರೀಕ್ಷಕರ ನೇಮಕಾತಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಸಹಾಯಕ ಇಂಜಿನಿಯರ್ಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿರುವುದನ್ನು ಇ.ಡಿ ಪತ್ತೆ ಮಾಡಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿತ್ತು.
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಮುಂದಿನ ತನಿಖೆಯನ್ನು ಇ.ಡಿ ಹಸ್ತಾಂತರಿಸಿದೆ. ಇ.ಡಿ ಸಲ್ಲಿಸಿರುವ ದೂರನ್ನು ಪಡೆದಿರುವ ಪೊಲೀಸರು ಅಡ್ವೋಕೇಟ್ ಜನರಲ್ ಕಚೇರಿಗೆ ಕಳುಹಿಸಿ ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ.