ಗುಳೇದಗುಡ್ಡದಲ್ಲಿ ನಮೋ ಸಪ್ತಗಿರಿ ಸೌಹಾರ್ದ ಸಹಕಾರಿ ಸಂಘವನ್ನು ಮಾಜಿ ಸಚಿವ ಬಿ. ಶ್ರೀರಾಮುಲು ಉದ್ಘಾಟಿಸಿದರು. ಕಾಶಿನಾಥ ಶ್ರೀಗಳು, ಡಾ. ನೀಲಕಂಠ ಶಿವಾಚಾರ್ಯ ಶ್ರೀಗಳು, ಗುರುಸಿದ್ಧ ಪಟ್ಟದಾರ್ಯ ಶ್ರೀಗಳು, ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಮಾಜಿ ಶಾಸಕ ರಾಜಶೇಖರ ಶೀಲವಂತ ಮತ್ತಿತರರಿದ್ದರು.
- ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿಕೆ
- ನಮೋ ಸಪ್ತಗಿರಿ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ
ಗುಳೇದಗುಡ್ಡ: ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ಸಣ್ಣ ವ್ಯಾಪಾರಸ್ಥರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಆರಂಭಿಸಿರುವ ನಮೋ ಸಪ್ತಗಿರಿ ಸೌಹಾರ್ದ ಸಹಕಾರಿ ಸಂಘ ಜನರ ವಿಶ್ವಾಸ ಗಳಿಸಿ ಮಾದರಿ ಸಂಸ್ಥೆಯಾಗಿ ಬೆಳೆಯಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.
ಪಟ್ಟಣದಲ್ಲಿ ನೂತನವಾಗಿ ಸ್ಥಾಪನೆಯಾದ ನಮೋ ಸಪ್ತಗಿರಿ ಸೌಹಾರ್ದ ಸಹಕಾರಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಜನರಲ್ಲಿ ಉಳಿತಾಯದ ಮನೋಭಾವ ಬೆಳೆಸುವುದರ ಜತೆಗೆ ಸ್ವ ಉದ್ಯೋಗಕ್ಕೆ ಅಗತ್ಯವಾದ ಆರ್ಥಿಕ ಸಹಕಾರ ನೀಡುವುದು ಸಂಘದ ಪ್ರಮುಖ ಉದ್ದೇಶವಾಗಬೇಕು ಎಂದರು.
ಯುವ ಮುಖಂಡ ಭುವನೇಶ್ ಪೂಜಾರ ಅವರ ಅಧ್ಯಕ್ಷತೆಯಲ್ಲಿ ಆರಂಭಗೊಂಡಿರುವ ಸಂಘವು ಸಮಾಜದ ವಿವಿಧ ವರ್ಗಗಳ ಅಭಿವದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು. ಯುವಕರು ಹಾಗೂ ಹಿರಿಯರನ್ನು ಒಗ್ಗೂಡಿಸಿಕೊಂಡು ಸಂಘ ಸ್ಥಾಪಿಸಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಸಂಸ್ಥೆಯು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಆಶಿಸಿದರು.
ಸಂಘವು ಮುಂದಿನ ದಿನಗಳಲ್ಲಿ ಸಣ್ಣಪುಟ್ಟ ಉದ್ಯಮ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಆರ್ಥಿಕ ಬೆಂಬಲ ನೀಡುವ ಮೂಲಕ ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡಬೇಕು. ಸಾರ್ವಜನಿಕರ ವಿಶ್ವಾಸವನ್ನು ಉಳಿಸಿಕೊಂಡು ಪಾರದರ್ಶಕವಾಗಿ ಕಾರ್ಯನಿರ್ವಹಿಸಿದರೆ ಸಹಕಾರಿ ಸಂಘವು ಉತ್ತಮ ಮಟ್ಟಕ್ಕೆ ಬೆಳೆಯಲು ಸಾಧ್ಯ ಎಂದು ಹೇಳಿದರು.
ಕಾಶಿನಾಥ ಶ್ರೀಗಳು, ಡಾ. ನೀಲಕಂಠ ಶಿವಾಚಾರ್ಯ ಶ್ರೀಗಳು, ಗುರುಸಿದ್ಧ ಪಟ್ಟದಾರ್ಯ ಶ್ರೀಗಳು, ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಮಾಜಿ ಶಾಸಕ ರಾಜಶೇಖರ ಶೀಲವಂತ ಸೇರಿ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.