ಪಿರಿಯಾಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಅಭಿಯಾನಕ್ಕೆ ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ರಾಜು ಚಾಲನೆ ನೀಡಿದರು. ನ್ಯಾಯಾಧೀಶರಾದ ಎಂ.ಆರ್.ಯೋಗೇಶ್, ಜೆ.ಶ್ವೇತಾ, ವಕೀಲರ ಸಂಘದ ಅಧ್ಯಕ್ಷರಾದ ಧನಪಾಲ್ ಇದ್ದರು.
ಪಿರಿಯಾಪಟ್ಟಣ: ನಾಗರಿಕರಲ್ಲಿ ಪರಿಸರ ಪ್ರಜ್ಞೆ ಮೂಡಿಸುವುದು ಎಲ್ಲರ ಸಾಮಾಜಿಕ ಹೊಣೆಗಾರಿಕೆಯಾಗಿದೆ ಎಂದು ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ರಾಜು ಹೇಳಿದರು.
ವಿಶ್ವ ಸ್ವಚ್ಛತಾ ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿ, ಇದೊಂದು ಜಾಗತಿಕ ಕಾರ್ಯಕ್ರಮವಾಗಿದ್ದು ಕಸಮುಕ್ತ ಪರಿಸರ ನಿರ್ಮಿಸಲು ಮತ್ತು ತ್ಯಾಜ್ಯ ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲು ವಿಶ್ವದಾದ್ಯಂತ ಲಕ್ಷಾಂತರ ಸ್ವಯಂಸೇವಕರು ಕೆಲಸ ಮಾಡುತ್ತಿದ್ದಾರೆ ಎಂದರು.
ಪರಿಸರ ಮಾಲಿನ್ಯವನ್ನು ತಡೆಗಟ್ಟುವುದು ಮತ್ತು ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡಲು ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶ. ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಮತ್ತು ಇತರ ತ್ಯಾಜ್ಯಗಳನ್ನು ಸಂಗ್ರಹಿಸಿ ಮರುಬಳಕೆ ಅಥವಾ ವಿಲೇವಾರಿ ಮಾಡುವುದು, ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.
ಮಹಾತ್ಮ ಗಾಂಧೀಜಿ ಅವರ ಸ್ಮರಣಾರ್ಥ ಜ.30ರಂದು ಭಾರತದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನವನ್ನಾಗಿ ಆಚರಿಸಲಾಗುತ್ತದೆ. ಗಾಂಧೀಜಿ ಅವರು ಸ್ವಚ್ಛತೆ ಮತ್ತು ನೈರ್ಮಲ್ಯ ಜೀವನದ ಅವಿಭಾಜ್ಯ ಅಂಗ ಎಂದೇ ನಂಬಿದ್ದರು. ದೈಹಿಕ ಯೋಗ ಕ್ಷೇಮ, ಆರೋಗ್ಯಕರ ವಾತಾವರಣ ನಿರ್ಮಾಣಕ್ಕೆ ಸ್ವಚ್ಛತೆ ಬಹುಮುಖ್ಯ ಕಾರಣವಾಗಿದ್ದು, ಸಾರ್ವಜನಿಕವಾಗಿ ನೈರ್ಮಲ್ಯ ಮಾಡುವುದು ಕ್ರಿಮಿನಲ್ ಅಪರಾಧವಾಗಿದೆ ಎಂದರು.
ನ್ಯಾಯಾಧೀಶರಾದ ಎಂ.ಆರ್.ಯೋಗೇಶ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಜೆ.ಶ್ವೇತಾ, ವಕೀಲರ ಸಂಘದ ಅಧ್ಯಕ್ಷ ಧನಪಾಲ್, ಕಾರ್ಯದರ್ಶಿ ಶಂಕರ್, ಖಜಾಂಚಿ ಹರೀಶ್, ಪ್ಯಾನಲ್ ವಕೀಲರಾದ ಶ್ರೀನಿವಾಸ್, ಮಹದೇವ್, ಸಂಗಮೇಶ್, ಗುರುಮೂರ್ತಿ, ಮೆಹಬೂಬ್, ಪ್ರಸನ್ನ, ಪುರಸಭೆ ಆರೋಗ್ಯ ನಿರೀಕ್ಷಕ ಪ್ರದೀಪ್ ಮತ್ತಿತರರು ಹಾಜರಿದ್ದರು.