ಮಂಡ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.  
ರಾಜ್ಯ

ಅನರ್ಹರಿಗೆ ಹಣ ಪಾವತಿಯಾಗದಿರಲಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಸೂಚನೆ

ಪ್ರಮುಖ ಮುಖ್ಯಾಂಶಗಳು

  • ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿ
  • ಫಲಾನುಭವಿ ಮರಣ ಹೊಂದಿದ ನಂತರವು ಅವರ ಖಾತೆಗೆ ಗೃಹಲಕ್ಷ್ಮೀ ಯೋಜನೆಯಡಿ ಹಣ ಪಾವತಿ
ಮಂಡ್ಯ: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಸರ್ಕಾರದ ಹಣ ದುರುಪಯೋಗವಾಗುವುದನ್ನು ತಪ್ಪಿಸುವುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜವಾಬ್ದಾರಿ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಫಲಾನುಭವಿ ಮರಣ ಹೊಂದಿದ ನಂತರವು ಅವರ ಖಾತೆಗೆ ಗೃಹಲಕ್ಷ್ಮೀ ಯೋಜನೆಯಡಿ ಹಣ ಪಾವತಿಯಾಗುತ್ತಿದೆ. ಆದ್ದರಿಂದ ಸರ್ಕಾರದ ಹಣ ದುರುಪಯೋಗವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಯುವ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 9,946 ಅಭ್ಯರ್ಥಿಗಳು 2026ರ ಮೇ ಮಾಹೆಯ ಅಂತ್ಯದವರಿಗೆ ನೋಂದಣಿ ಆಗಿದ್ದಾರೆ. ಅಂತೆಯೇ 8,723 ಅಭ್ಯರ್ಥಿಗಳಿಗೆ ಕಂತುಗಳ ಮೂಲಕ 26,28,34,500 ರೂಗಳು ಏಪ್ರಿಲ್ ಅಂತ್ಯಕ್ಕೆ ವರ್ಗಾವಣೆಯಾಗಿದೆ. ಇನ್ನು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯು ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಫಲಾನುಭವಿಗೆ ತಿಂಗಳಿಗೆ 5 ಕೆ.ಜಿ ಉಚಿತ ಅಕ್ಕಿ ನೀಡಲಾಗುತ್ತಿದೆ. ಆದ್ದರಿಂದ ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ಯೋಜನೆಯನ್ನು ತಲುಪಿಸುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ತಾಲೂಕುವಾರು ಸರಿಯಾದ ಸಮಯಕ್ಕೆ ಗೋಡೋನಿಂದ ನ್ಯಾಯಬೆಲೆ ಅಂಗಡಿಗೆ ನಂತರ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ವಹಿಸಬೇಕು ಎಂದರು.
ಶಕ್ತಿ ಯೋಜನೆ ಹಿನ್ನಲೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತಿದ್ದಾರೆ. ಕಳೆದ ಮೇ ಅಂತ್ಯದವರಿಗೆ 23 ಕೋಟಿ ಮಹಿಳಾ ಪ್ರಯಾಣಿಕರು ಶಕ್ತಿಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ 613 ಕೋಟಿ ರೂ ಆದಾಯ ಬಂದಿದೆ. ಪ್ರಸ್ತುತ ಯೋಜನೆಯಡಿ ಶಾಲಾ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ಪಾಸ್ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇಲ್ಲಿಯವರಿಗೆ 8,200ಕ್ಕೂ ಹೆಚ್ಚು ಬಸ್‌ಪಾಸ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ.ಹನುಮಂತಯ್ಯ, ರಾಜೇಂದ್ರ ಪ್ರಸಾದ್, ಶಿವಣ್ಣ, ಪ್ರಶಾಂತ್‌ಬಾಬು ಇತರರಿದ್ದರು.