ವಿಧಾನಸೌಧ 
ರಾಜ್ಯ

ಮೇಕೆದಾಟು ಕಾನೂನು, ವೈಜ್ಞಾನಿಕವಾಗಿರಲಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಪ್ರಕ್ರಿಯೆಗಳು ವೈಜ್ಞಾನಿಕ, ಕಾನೂನುಬದ್ಧವಾಗಿ ಮತ್ತು ತಾಂತ್ರಿಕವಾಗಿ ಮುಂದುವರಿಸುವಂತೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಯೋಜನೆಯ ಪ್ರಸ್ತುತ ಸ್ಥಿತಿಗತಿ, ಎದುರಾಗಿರುವ ಸವಾಲು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು.
ಬೆಂಗಳೂರು ಸೇರಿ ಸುತ್ತಮುತ್ತಲಿನ ಪ್ರದೇಶಗಳಿಗೆ ಭವಿಷ್ಯದಲ್ಲಿ ಸಮರ್ಪಕ ಹಾಗೂ ಶಾಶ್ವತ ಕುಡಿಯುವ ನೀರು ಒದಗಿಸುವ ದೃಷ್ಟಿಯಿಂದ ಮೇಕೆದಾಟು ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಯೋಜನೆಯ ವಿಸ್ತೃತ ಯೋಜನಾ ವರದಿ (ಡಿಪಿಆರ್), ಕೇಂದ್ರ ಸರ್ಕಾರ ಹಾಗೂ ಸಂಬಂಧಿಸಿದ ಪ್ರಾಧಿಕಾರಗಳಿಂದ ಅಗತ್ಯ ಅನುಮತಿ, ಪರಿಸರ ಮತ್ತು ಅರಣ್ಯ ಸಂಬಂಧಿತ ವಿಷಯ, ಭೂಸ್ವಾಧೀನ, ಪುನರ್ವಸತಿ, ಯೋಜನೆಯ ತಾಂತ್ರಿಕ ಅಂಶಗಳು ಹಾಗೂ ರಾಜ್ಯದ ಹಿತಾಸಕ್ತಿ ಕಾಪಾಡಿಕೊಂಡು ಯೋಜನೆಯನ್ನು ಮುಂದುವರಿಸುವ ಕಾರ್ಯತಂತ್ರ ರೂಪಿಸಬೇಕು.
ಮೇಕೆದಾಟು ಯೋಜನೆ ಕೇವಲ ಒಂದು ನೀರಾವರಿ ಯೋಜನೆಯಲ್ಲ. ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರ ಪ್ರದೇಶಗಳ ಕುಡಿಯುವ ನೀರಿನ ಭವಿಷ್ಯದ ಯೋಜನೆ. ಆದ್ದರಿಂದ ಈ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ಕಾನೂನುಬದ್ಧವಾಗಿ ಹಾಗೂ ವೈಜ್ಞಾನಿಕವಾಗಿ ಮುಂದುವರಿಸಿಕೊಂಡು ಹೋಗಬೇಕು ಎಂದು ಚಲುವರಾಯಸ್ವಾಮಿ ಸಲಹೆ ನೀಡಿದರು.
ಜನರ ಕುಡಿಯುವ ನೀರಿನ ಹಕ್ಕು ಮತ್ತು ರಾಜ್ಯದ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸಾಧ್ಯವಿಲ್ಲ. ಯೋಜನೆಯ ಪ್ರತಿಯೊಂದು ಹಂತದಲ್ಲೂ ಕಾನೂನು ಮತ್ತು ತಾಂತ್ರಿಕ ನಿಯಮಗಳನ್ನು ಪಾಲಿಸಬೇಕು.ಅಗತ್ಯ ಅನುಮತಿಗಳನ್ನು ಪಡೆಯುವ ಪ್ರಕ್ರಿಯೆಗೆ ವೇಗ ನೀಡಬೇಕು. ಇದುವರೆಗೆ ಕೈಗೊಂಡಿರುವ ಕ್ರಮಗಳು, ಬಾಕಿ ಇರುವ ಅನುಮತಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಪ್ರಸ್ತಾವನೆಯನ್ನು ಸಿದ್ಧಪಡಿಸಿ ನೀಡುವಂತೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ ಸೇರಿದಂತೆ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.