ಮುಂದಿನ 5 ದಿನ ಸಾಧಾರಣ ವರ್ಷಧಾರೆ
ಬೆಂಗಳೂರು: ಅರಬ್ಬಿ ಸಮುದ್ರದ ಮೇಲ್ಭಾಗದಲ್ಲಿ ತೇವಾಂಶ ಭರಿತ ಮೋಡದ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಮತ್ತು ವಿಜಯನಗರದಲ್ಲಿ ಮೇ 23ರಿಂದ ಮೇ 27ವರೆಗೆ ಬಿರುಗಾಳಿ ಸಹಿತ ಮಳೆ ಸುರಿಯಲಿದೆ.ಕರಾವಳಿ ಕರ್ನಾಟಕದಲ್ಲಿ ಪ್ರತಿ ಗಂಟೆಗೆ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಹಿನ್ನೆಲೆಯಲ್ಲಿ ಸಮುದ್ರದಕ್ಕೆ ಮೀನುಗಾರರು ಇಳಿಯದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮುಂದಿನ 2 ದಿನ ತುಸು ಬಿರುಸಾಗಿ ಮಳೆಯಾಗಲಿದೆ. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಕೆಲ ವ್ಯಾಪ್ತಿಯ ಪ್ರದೇಶಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಜಾಸ್ತಿ ಇರಲಿದೆ.
ಪೂರ್ವ ಮುಂಗಾರಿನ ಅವಧಿಯಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಮಾತ್ರ ಜೋರಾಗಿ ಮಳೆ ಸುರಿಯುತ್ತಿದೆ. ಆದರೆ, ಬಹುತೇಕ ಪ್ರದೇಶಗಳಲ್ಲಿ ಲಘು ಪ್ರಮಾಣದಲ್ಲಿ ವರ್ಷಧಾರೆಯಾಗುತ್ತಿದೆ. ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಮಳೆ ತರುವಂತಹ ಯಾವುದೇ ಪ್ರತಿಕೂಲ ವಾತಾವರಣ ಇಲ್ಲವಾಗಿದೆ. ಮಾ.1ರಿಂದ ಮೇ 22ವರೆಗೆ ರಾಜ್ಯದಲ್ಲಿ ವಾಡಿಕೆಯಷ್ಟೇ ಮಳೆ ಸುರಿದಿದೆ. ಈ ಅವಧಿಯಲ್ಲಿ ಮಲೆನಾಡು ಮತ್ತು ದಕ್ಷಿಣ ಕರ್ನಾಟಕದ ಶೇ.80 ಪ್ರದೇಶಗಳಲ್ಲಿ ಮಳೆ ಕೊರತೆಯಾಗಿದೆ ಎನ್ನುತ್ತಾರೆ ಹವಾಮಾನ ತಜ್ಞರು.
ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಪ್ರಸ್ತುತ ಹವಾಮಾನ ಪರಿಸ್ಥಿತಿಯನ್ನು ಗಮನಿಸಿದರೆ ಮಾಸಾಂತ್ಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶಿಸಬಹುದು. ಬಳಿಕ, ಜೂನ್ ಮೊದಲ ವಾರದಲ್ಲಿ ಕರ್ನಾಟಕದ ಕರಾವಳಿ ಭಾಗಕ್ಕೆ ಆಗಮಿಸಬಹುದು. ಪೂರ್ವ ಮುಂಗಾರು ಅವಧಿಯಲ್ಲಿ ಅಥವಾ ಮುಂಗಾರು ಆಗಮಿಸುವ ಮುನ್ನ ಚಂಡಮಾರುತ ರೂಪುಗೊಳ್ಳಬೇಕಿತ್ತು. ಈ ಬಾರಿ ಪ್ರಬಲ ಚಂಡಮಾರುತಗಳು ಉಂಟಾಗುವ ಪ್ರತಿಕೂಲ ಹವಾಮಾನ ಇಲ್ಲವಾಗಿದೆ.
- ಸಿ.ಎಸ್.ಪಾಟೀಲ್. ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ.