ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಇಂದು(ಜ.31) ಬೆಳ್ಳಂಬೆಳಿಗ್ಗೆ ಭೀಕರ ದುರಂತವೊಂದು ಸಂಭವಿಸಿದೆ. ಹುಮನಾಬಾದ್ ತಾಲೂಕಿನ ಮೊಳಕೇರಾ (Molakera) ಗ್ರಾಮದಲ್ಲಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡ ಪರಿಣಾಮ, ಶಾಲಾ ಮಕ್ಕಳು ಸೇರಿದಂತೆ ಒಟ್ಟು ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೊಳಗಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ನಡೆದದ್ದೇನು?
ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನದ ಸಮೀಪ ಈ ಸ್ಫೋಟ ಸಂಭವಿಸಿದೆ. ಇಂದು ಬೆಳಿಗ್ಗೆ ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲಿ, ರಸ್ತೆ ಬದಿಯಲ್ಲಿದ್ದ ಯಾವುದೋ ನಿಗೂಢ ವಸ್ತು ದಿಢೀರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಮನೆಗಳ ಕಿಟಕಿ ಗಾಜುಗಳು ಪುಡಿಯಾಗಿದ್ದು, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.
ಗಾಯಾಳುಗಳ ಸ್ಥಿತಿ ಗಂಭೀರ
ಈ ದುರ್ಘಟನೆಯಲ್ಲಿ ಗಾಯಗೊಂಡ ಆರು ಜನರನ್ನು ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೀದರ್‌ನ ಬ್ರಿಮ್ಸ್ (BRIMS) ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಲ್ಲಿ ನಾಲ್ವರು ಶಾಲಾ ಮಕ್ಕಳಿದ್ದು, ಇಬ್ಬರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಪೊಲೀಸ್ ಬಿಗಿ ಭದ್ರತೆ
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳ ಸ್ಥಳಕ್ಕೆ ಆಗಮಿಸಿದ್ದು, ಸ್ಫೋಟಗೊಂಡ ವಸ್ತು ಪಟಾಕಿಯೇ ಅಥವಾ ಬೇರೆ ಯಾವುದಾದರೂ ಅಪಾಯಕಾರಿ ಸ್ಫೋಟಕವೇ ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸಮಗ್ರ ತನಿಖೆಗೆ ಸಚಿವರ ಆದೇಶ
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಸಮಗ್ರ ತನಿಖೆಗೆ ಆದೇಶ ನೀಡಿದ್ದಾರೆ.ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಸಚಿವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಹಿರಿಯ ಅಧಿಕಾರಿಗಳು ಹಾಗೂ ಸ್ಫೋಟಕ ಪರೀಕ್ಷಾ ತಜ್ಞರ (Forensic Experts) ತಂಡವನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಲು ಸೂಚಿಸಿದ್ದಾರೆ. ಗಾಯಾಳುಗಳ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಈಶ್ವರ ಖಂಡ್ರೆ ಅವರು, ಗಾಯಗೊಂಡವರಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸಲಿದೆ ಎಂದು ಅವರು ಭರವಸೆ ನೀಡಿದ್ದಾರೆ,(ಏಜೆನ್ಸೀಸ್).