- * ಪ್ರಶಸ್ತಿಯು 25 ಸಾವಿರ ನಗದು ಹಾಗೂ ಕಂಚಿನ ಫಲಕ ಒಳಗೊಂಡಿದೆ
ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ 2026ನೇ ಸಾಲಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಜಾನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 25 ಸಾವಿರ ನಗದು ಹಾಗೂ ಕಂಚಿನ ಫಲಕ ಒಳಗೊಂಡಿದೆ. 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಗೊ.ರು.ಚನ್ನಬಸಪ್ಪ ಅವರು, ಈ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಜೂನ್ 2ರಂದು ಸಂಜೆ 5.15ಕ್ಕೆ ನಗರದ ಕನ್ನಡ ಭವನದಲ್ಲಿನ ನಯನ ಸಭಾಂಗಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಹಿತಿ ಹಂಪ ನಾಗರಾಜಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಆರ್.ಕೆ. ನಲ್ಲೂರು ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಮತ್ತು ಮಾಜಿ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ಭಾಗವಹಿಸಲಿದ್ದಾರೆ ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.