ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಕುರಿತು ಅಧಿಕಾರಿಗಳ ಸಭೆ
- ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
- ಡಿ. 21 ರಿಂದ 24ರವರೆಗೆ ಆಯೋಜನೆ
- ನಗರದ ಸುಮಾರು 2,05,530 ಮಕ್ಕಳಿಗೆ ಸಲಿಕೆ ಹಾಕುವ ಗುರಿ
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾದ್ಯಂತ ಡಿ. 21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಆಯೋಜಿಸಿದ್ದು, ಐದು ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ವಂಚಿತವಾದಂತೆ ನಿಗಾವಹಿಸಬೇಕು ಎಂದು ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಜಿ. ಜಗದೀಶ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ಸರ್ಕಾರ ಅಗತ್ಯ ಸಹಕಾರ ನೀಡುತ್ತಿದ್ದು, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ರಾಷ್ಟ್ರೀಯ ಪಲ್ಸ್ ಫೋಲಿಯೋ ಕಾರ್ಯಕ್ರಮದ ಬಗ್ಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಲಸಿಕೆಯ ಕುರಿತು ಜಾಗೃತಿ ಮೂಡಿಸುವುದರ ಜತೆಗೆ ಈ ಬಾರಿಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶೇ. 100 ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ರವೀಂದ್ರನಾಥ್ ಮೇಟಿ ಮಾತನಾಡಿ, ಜಿಲ್ಲೆಯಲ್ಲಿ ಐದು ವರ್ಷದೊಳಗಿರುವ ಸುಮಾರು 2,05,530 ಮಕ್ಕಳು ಇದ್ದು, ಲಸಿಕೆ ಹಾಕಲು 728 ಲಸಿಕಾ ಬೂತ್‌ಗಳು, 44 ಟ್ರಾನ್ಸಿಟ್ ತಂಡ ಮತ್ತು 55 ಮೊಬೈಲ್ ತಂಡಗಳನ್ನು ರಚಿಸಲಾಗಿದ್ದು, ಒಟ್ಟು 2,912 ಲಸಿಕಾ ಕಾರ್ಯಕರ್ತರು, 146 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಡಿ. 21ರಂದು ನಡೆಯುವ ಲಸಿಕಾ ಕಾರ್ಯಕ್ರಮ ಬೆಳಗ್ಗೆ 8 ರಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ. 22 ರಿಂದ 24 ರವರೆಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಕಳೆದ 14 ವರ್ಷಗಳಿಂದ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ. ಕರ್ನಾಟಕದಲ್ಲಿ 2007 ರಲ್ಲಿ ಕೊನೆಯದಾಗಿ ಒಂದು ಪ್ರಕರಣ ಪತ್ತೆಯಾಗಿತ್ತು. ನಂತರ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. ಪೋಲಿಯೋ ಲಸಿಕೆ ಹಾಕಿಸಿದ ಮಗುವಿನ ಕಿರು ಬೆರಳಿಗೆ ಇಂಕ್ ಹಾಕಲಾಗುವುದು. ಇನ್ನು ವಲಸೆ ಹೋಗಿರುವ ಹಾಗೂ ವಲಸೆ ಬಂದಿರುವ ಕುಟುಂಬದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ಯತೀಶ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ನದೀಮ್ ಅಹಮದ್, ಜಿಲ್ಲಾ ಶಸ್ತ್ರ ಚಿಕಿತ್ಸೆಕ ಡಾ. ಸುರೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ಶರತ್, ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.