ಮುದ್ದೇಬಿಹಾಳ ಪಟ್ಟಣದ ಎಪಿಎಂಸಿ ಬಡಾವಣೆಯಲ್ಲಿರುವ ಕರ್ನಾಟಕ ಬ್ಯಾಂಕ್ ಸಭಾಭವನದಲ್ಲಿ ನಡೆದ ಮತಕ್ಷೇತ್ರದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಮಾತನಾಡಿದರು. ಪ್ರಕಾಶ ಒಡ್ಡರ, ಚಂದ್ರಶೇಖರ ಕುಂಬಾರ, ಕೀರ್ತಿ ಚಾಲಕ, ಸಂಗನಗೌಡ ಬಿರಾದಾರ ಮತ್ತಿತರರಿದ್ದರು. 
ರಾಜ್ಯ

ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲಿ

ಮಾರುತಿ ತಳ್ಳಳ್ಳಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿ.ಎಸ್. ನಾಡಗೌಡ ಎಚ್ಚರಿಕೆ
  • ಪ್ರಗತಿ ಪರಿಶೀಲನಾ ಸಭೆ
ಮುದ್ದೇಬಿಹಾಳ : ತಾಲೂಕಿನ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ತಕ್ಷಣದಲ್ಲಿಯೇ ಸ್ಪಂದಿಸುವ ಮೂಲಕ ಜನರಿಗೆ ನ್ಯಾಯ ಒದಗಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಬರಿ ನೆಪ ಹೇಳಿಕೊಂಡು ಕಾಲಹರಣ ಮಾಡದಿರಿ ಎಂದು ಅಧಿಕಾರಿಗಳಿಗೆ ಶಾಸಕ ಸಿ.ಎಸ್. ನಾಡಗೌಡ ಎಚ್ಚರಿಕೆ ನೀಡಿದರು.
ಪಟ್ಟಣದ ಎಪಿಎಂಸಿ ಬಡಾವಣೆಯಲ್ಲಿರುವ ಕರ್ನಾಟಕ ಬ್ಯಾಂಕ್ ಸಭಾಭವನದಲ್ಲಿ ಇತ್ತೀಚೆಗೆ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಶಾಲೆಗಳಿಂತ ಸರ್ಕಾರಿ ಶಾಲೆ ಶಿಕ್ಷಕರು ಪ್ರತಿಭಾನ್ವಿತರಾಗಿರುತ್ತಾರೆ ಈ ಕುರಿತು ಪಾಲಕರಿಗೆ ತಮ್ಮ ಮಕ್ಕಳನ್ನು ಓದಿಸಲು ಸರ್ಕಾರಿ ಶಾಲೆಗಳಿಗೆ ಕಳುಹಿಸುವಂತೆ ಅರಿವು ಮೂಡಿಸಬೇಕು. ಸರ್ಕಾರಿ ಶಾಲೆಗಳಲ್ಲಿನ ಮಕ್ಕಳ ಗುಣಮಟ್ಟ ಶಿಕ್ಷಣ ಒದಗಿಸಲು ಯಾವುದೇ ತೊಂದರೆಯಾಗದಂತೆ ಶಾಲಾ ಕಟ್ಟಡಗಳ ದುರಸ್ತಿಗಾಗಿ ಹಾಗೂ ಇತರೇ ಮೂಲಸೌಲಭ್ಯಗಳನ್ನು ಒದಗಸಲು ಮುಖ್ಯಮಂತ್ರಿಗಳೊಂದಿಗೆ ವಿಶೇಷ ಅನುದಾನ ತರುವ ಮೂಲಕ ಅಭಿವೃದ್ಧಿ ಪಡಿಸಲಾಗುವುದು. ಸದ್ಯ ಮುಖ್ಯಮಂತ್ರಿ ಬದಲಾವಣೆಯಾಗಿರುವುದರಿಂದ ಆರ್ಥಿಕ ಅನುಮೋದನೆಗೆ ಸ್ವಲ್ಪ ವಿಳಂಬವಾಗಿರಬಹುದು ಎಂದ ಅವರು, ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿ ಬಿ ಎಸ್ ಸಾವಳಗಿ ಅವರಿಗೆ ಸೂಚಿಸಿದರು.
ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರಲ್ಲಿ ಅರಿವು ಮೂಡಿಸಿ, ಹಣ್ಣು ಹಾಗೂ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ತಾಲೂಕಿನಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕು. ವಿಶೇಷವಾಗಿ ಡಾಬಾಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಡೆಯಲು ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸಬೇಕು ಎಂದು ಹೇಳಿದರು.
ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದೆ. ಕೆಲವೇ ದಿನಗಳಲ್ಲಿ ಹೆಚ್ಚಿನ ವೈದ್ಯರನ್ನು ನೇಮಕ ಮಾಡಿಕೊಳ್ಳುವ ಮೂಲಕ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ರಕ್ಷಣೆಗೆ ಅನುಕೂಲ ಮಾಡಿ ಕೊಡಲಾಗುವುದು. ಆಧಾರರಹಿತ ಆರೋಪಗಳನ್ನು ಮಾಡುವ ಬದಲು ಆರೋಗ್ಯ ಸೇವೆಗಳ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು. ಯಾರೂ ಕೂಡ ಅನಗತ್ಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದರು.
ಸರ್ಕಾರದ ವಿವಿಧ ಯೋಜನೆಗಳು ಅರ್ಹ ಲಾನುಭವಿಗಳಿಗೆ ತಲುಪುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ರೈತರು ಹೈನುಗಾರಿಕೆಯನ್ನು ಉಪ ಕಸುಬಾಗಿ ಅಳವಡಿಸಿಕೊಳ್ಳುವಂತೆ ಕೃಷಿ ಹಾಗೂ ಪಶುಸಂಗೋಪನಾ ಇಲಾಖೆಗಳು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಕುಡಿಯುವ ನೀರಿನ ಉದ್ದೇಶಕ್ಕಾಗಿ ತುಂಬಿಸಿರುವ ಕೆರೆಗಳ ನೀರನ್ನು ಮೋಟಾರ್ ಪಂಪ್‌ಗಳ ಮೂಲಕ ಕೃಷಿಗೆ
ಬಳಸುತ್ತಿರುವ ಪರಿಣಾಮ ಕೆರೆಗಳು ಬರಿದಾಗುತ್ತಿವೆ. ಇಂತಹ ಅಕ್ರಮಗಳನ್ನು ತಡೆದು ಕುಡಿಯುವ ನೀರಿನ
ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯ ಅನುಷ್ಠಾನವೂ ಸಂಪೂರ್ಣ ವಿಲವಾಗಿದೆ. ಗುತ್ತಿಗೆದಾರರ ಮೇಲೆ ಯಾವುದೇ ಕ್ರಮ ಕೈಗೊಳ್ಳುವ ಬದಲಾಗಿ ಅವರು ಕಾಮಗಾರಿಗಳು ಪೂರ್ಣಗೊಳ್ಳದೇ ಎನ್‌ಒಸಿ ನೀಡಿರುವುದು ಹೇಗೆ ಎಂಬ ಪ್ರಶ್ನೆ ಎತ್ತಿದರು. ಇದರಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯ ಸ್ಪಷ್ಟವಾಗಿ ಕಂಡು ಬರುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಿಜಯಪುರದ ಜಿಲ್ಲಾಪಂಚಾಯಿತಿ ಉಪಕಾರ್ಯದರ್ಶಿ ಪ್ರಕಾಶ ಒಡ್ಡರ, ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಕುಂಬಾರ, ತಹಸೀಲ್ದಾರ್ ಕೀರ್ತಿ ಚಾಲಕ, ತಾ.ಪಂ. ಇಒ ಸಂಗನಗೌಡ ಬಿರಾದಾರ, ನಿಡಗುಂದಿ ತಾ.ಪಂ. ಇಒ ವೆಂಕಟೇಶ ವಂದಾಲ, ತಾಳಿಕೋಟೆ ತಹಸೀಲ್ದಾರ ವಿನಯಾ ಹೂಗಾರ, ಎ.ಕೆ. ಚಲವಾದಿ, ಸಿಪಿಐ ಮಹಮ್ಮದ ಶಿವುದ್ದೀನ್ ಮತ್ತಿತರರಿದ್ದರು.