ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ಜಾರಿಗೊಳಿಸದಂತೆ ಆಗ್ರಹಿಸಿ ತಹಸೀಲ್ದಾರ್ ತನ್ಮಯಿ ಅವರಿಗೆ ಮನವಿ ಸಲ್ಲಿಸಿದರು. ಮಹದೇವಪ್ರಸಾದ್, ಬಸವಣ್ಣ, ರೇವಣ್ಣ ಇದ್ದರು.
ಗುಂಡ್ಲುಪೇಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು ಹೊರಟಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರದರ್ಶನ ನಡೆಸಿ ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ಜಾರಿ ಮಾಡಬಾರದು ಎಂದು ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್ ನೇತೃತ್ವದಲ್ಲಿ ಬುಧವಾರ ಮುಖ್ಯರಸ್ತೆಯಲ್ಲಿ ಸಾಗಿದ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಸಮಾವೇಶಗೊಂಡರು. ರಾಜ್ಯ ಸರ್ಕಾರವು ದುರುದ್ದೇಶದಿಂದ ನಾಗರಿಕರ ವಾಕ್ ಸ್ವಾತಂತ್ರ್ಯ ಕಸಿದುಕೊಳ್ಳಲು ಹೊಸ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿದೆ. ಈ ಬಾರಿ ವಿಧಾನಸಭೆಯಲ್ಲಿ ಮಂಡಿಸಿದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವು ಸಂವಿಧಾನದಡಿ ನೀಡಲಾದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಇದನ್ನು ಜಾರಿಯಾಗಲು ಬಿಡಬಾರದು ಎಂದು ಒತ್ತಾಯಿಸಿದ ಮನವಿ ಪತ್ರವನ್ನು ತಹಸೀಲ್ದಾರ್ ಎಂ.ಎಸ್.ತನ್ಮಯಿ ಅವರಿಗೆ ಸಲ್ಲಿಸಿದರು.
ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನಮಲ್ಲೀಪುರ ಬಸವಣ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕಬ್ಬಹಳ್ಳಿ ರೇವಣ್ಣ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಗರಗನಹಳ್ಳಿ, ಸುನೀಲ್ ಮೂಡ್ಲು, ಮುಖಂಡರಾದ ಮಂಚಹಳ್ಳಿ ಬಾಬು, ಹನುಮಂತಶೆಟ್ಟಿ, ಕೃಷ್ಣ, ಮೋಹಮ್ಮದ್ ಹನೀಫ್, ಸದ್ದಾಮ್ ಹುಸೇನ್, ಅನಿಲ್ ಇತರರು ಇದ್ದರು.