ಆಳಂದ: ಪ್ರಸಕ್ತ ವರ್ಷ ಮಳೆ ಕೊರತೆಯಿಂದ ತಾಲೂಕಿನಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭದಲ್ಲಿ ಸರ್ಕಾರದ ಬರ ಪಟ್ಟಿಯಿಂದ ತಾಲೂಕನ್ನು ಕೈಬಿಟ್ಟಿರುವುದು ಖಂಡನೀಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಬಹುತೇಕ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜಲಾಶಯ, ಕೆರೆ-ಕಟ್ಟೆ ಹಾಗೂ ಹಳ್ಳ-ಕೊಳ್ಳಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಬಿತ್ತನೆ ಮಾಡಿದ ಬೆಳೆಗಳು ಒಣಗಿ ಹೋಗಿವೆ. ಮಳೆ ಕೈಕೊಟ್ಟಿರುವ ಪರಿಣಾಮ ರೈತರ ಕೃಷಿ ವೆಚ್ಚವೂ ವ್ಯರ್ಥವಾಗಿದೆ. ತಾಲೂಕಿನ ಬರ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರಲು ಶಾಸಕ ಬಿ.ಆರ್.ಪಾಟೀಲ್ ವಿಫಲರಾಗಿದ್ದಾರೆ. ಅವರ ರೈತಪರ ಕಾಳಜಿ ಕೇವಲ ಭಾಷಣದಲ್ಲಿದೆ ಹೊರತು ಕಾರ್ಯದಲ್ಲಿಲ್ಲ ಎಂದು ಕಿಡಿಕಾರಿದ್ದಾರೆ.
ಸರ್ಕಾರ ಬರ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಸ್ಥಳಿಯ ವಾಸ್ತವಾಂಶಗಳನ್ನು ಪರಿಗಣಿಸಬೇಕಿತ್ತು. ಆದರೆ ತಾಲೂಕಿನ ರೈತರ ಸಂಕಷ್ಟವನ್ನು ಕಡೆಗಣಿಸಿ ಬರ ಪಟ್ಟಿಯಿಂದ ಹೊರಗಿಟ್ಟಿರುವುದು ರೈತ ವಿರೋಧಿ ನಿರ್ಧಾರವಾಗಿದೆ. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಿದೆ. ಸರ್ಕಾರ ದಾಖಲೆಗಳಿಗೆ ಮಾತ್ರ ಸೀಮಿತವಾಗದೆ, ಗ್ರಾಮೀಣ ಪ್ರದೇಶಗಳಿಗೆ ತೆರಳಿ ವಾಸ್ತವ ಪರಿಸ್ಥಿತಿ ಪರಿಶೀಲಿಸಬೇಕು. ಸರ್ಕಾರ ತನ್ನ ನಿರ್ಧಾರ ಮರುಪರಿಶೀಲಿಸದಿದ್ದರೆ ರೈತರೊಂದಿಗೆ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.