ಲೋಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಕಲ್ಪ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ ತಾಲೂಕು ವೈದ್ಯಾಧಿಕಾರಿ ಡಾ. ವೆಂಕಟೇಶ ಮಲಘಾಣ ಚಾಲನೆ ನೀಡಿದರು. ಡಾ. ವಿನಯ ಕುಲಕರ್ಣಿ, ಜೆ.ಪಿ.ಜಲಗೇರಿ, ಎ.ಎಸ್.ಮುದಕವಿ ಆಶಾ ಕಾರ್ಯಕರ್ತೆಯರು ಇತರರಿದ್ದರು.
- ತಾಲೂಕು ವೈದ್ಯಾಕಾರಿ ಡಾ. ವೆಂಕಟೇಶ ಮಲಘಾಣ ಹೇಳಿಕೆ
- ಸ್ವಚ್ಛತಾ ಅಭಿಯಾನ
ಲೋಕಾಪುರ: ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆ, ನೈರ್ಮಲ್ಯ ಮತ್ತು ಸೋಂಕು ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ರೋಗಿಗಳಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಮುಖ್ಯ ಆದ್ಯತೆಯಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ವೆಂಕಟೇಶ ಮಲಘಾಣ ಹೇಳಿದರು.
ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಕಲ್ಪ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಮತ್ತು ಸೋಂಕು ನಿಯಂತ್ರಣವನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 2015ರಲ್ಲಿ ಕಾಯಕಲ್ಪ ಯೋಜನೆಯನ್ನು ಆರಂಭಿಸಿದೆ ಎಂದು ವಿವರಿಸಿದರು.
ಡಾ. ವಿನಯ ಕುಲಕರ್ಣಿ ಮಾತನಾಡಿ, ಆರೋಗ್ಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೋಂಕು ನಿಯಂತ್ರಣದ ಉತ್ತಮ ಕ್ರಮಗಳನ್ನು ಅನುಸರಿಸುವುದು ಹಾಗೂ ನಿರಂತರ ಮೌಲ್ಯಮಾಪನದ ಮೂಲಕ ಗುಣಮಟ್ಟವನ್ನು ಉಳಿಸಿಕೊಳ್ಳುವುದು ಈ ಕಾರ್ಯಕ್ರಮದ ಪ್ರಮುಖ ಗುರಿಯಾಗಿದೆ ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಜೆ.ಪಿ.ಜಲಗೇರಿ, ಎ.ಎಸ್.ಮುದಕವಿ, ನಾಗಪ್ಪ ಸುಣಗಾರ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.