ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮುಜರಾಯಿ ಇಲಾಖೆ ಅಧಿಕಾರಿಗಳೊಂದಿಗೆ ಪರಮೇಶ್ವರ್ ಪ್ರಗತಿ ಪರಿಶೀಲನಾ ಸಭೆ  
ರಾಜ್ಯ

ಗ್ರಾಮೀಣ ಕ್ರೀಡೆಗೆ ಉತ್ತೇಜನ

ಬೆಂಗಳೂರು: ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಯುವಕರಿಗೆ ಉತ್ತೇಜನ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮುಜರಾಯಿ ಇಲಾಖೆ ಅಧಿಕಾರಿಗಳೊಂದಿಗೆ ಪರಮೇಶ್ವರ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರಿಗೆ ಸೂಕ್ತ ತರಬೇತಿ, ಆರ್ಥಿಕ ನೆರವು ಮತ್ತು ಸ್ಪರ್ಧಾತ್ಮಕ ಅವಕಾಶಗಳನ್ನು ಒದಗಿಸಿದರೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಅಲ್ಲದೆ, ರಾಜ್ಯದ ಸಾಂಪ್ರದಾಯಿಕ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದರು.
ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರದಿಂದ ನೀಡಲಾಗುವ ವಿವಿಧ ಪ್ರಶಸ್ತಿಗಳ ಕುರಿತು ಸಭೆಯಲ್ಲಿ ಚರ್ಚಿಸಿದರು. ಸಾಧಕರಿಗೆ ನೀಡಬೇಕಿರುವ ಕ್ರೀಡಾ ಪ್ರಶಸ್ತಿಗಳನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಬಾರದು. ಅರ್ಹ ಕ್ರೀಡಾಪಟುಗಳನ್ನು ಪಾರದರ್ಶಕವಾಗಿ ಗುರುತಿಸಿ, ಪ್ರಶಸ್ತಿಗಳನ್ನು ನೀಡುವ ಮೂಲಕ ಅವರ ಸಾಧನೆಯನ್ನು ಗೌರವಿಸುವ ಕೆಲಸವಾಗಬೇಕು.
ಯುವ ಕ್ರೀಡಾಪಟುಗಳಿಗೂ ಪ್ರೇರಣೆಯಾಗಲಿದೆ. ಒಲಂಪಿಕ್, ಏಷ್ಯಾನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್ ಸೇರಿದಂತೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ರಾಜ್ಯಕ್ಕೆ ಕೀರ್ತಿ ತಂದ ಕ್ರೀಡಾಪಟುಗಳಿಗೆ ವಿವಿಧ ಇಲಾಖೆಯ ಹುದ್ದೆಗಳಿಗೆ ನೇಮಕ ಮಾಡುವ ಮೂಲಕ, ಕ್ರೀಡಾಪಟುಗಳಿಗೆ ಉತ್ತೇಜನ ಸರ್ಕಾರದ ಜವಾಬ್ದಾರಿ ಎಂದು ತಿಳಿಸಿದರು