ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ
- ಶಿಕ್ಷಣ ಇಲಾಖೆಯಲ್ಲೇ ಸುಮಾರು 18ರಿಂದ 19 ಸಾವಿರ ಖಾಲಿ ಹುದ್ದೆಗಳ ಭರ್ತಿ ಆಗಲಿದೆ
- ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಮುಖ್ಯ ಗ್ರಂಥಪಾಲಕರ ಹುದ್ದೆಗಳನ್ನು ಶೀಘ್ರದಲ್ಲಿಯೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಭರ್ತಿ
- ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಿನದ 24 ಗಂಟೆಯೂ ಓದಲು ಸಾಧ್ಯವಾಗುವ ಗ್ರಂಥಾಲಯಗಳನ್ನು ಸ್ಥಾಪಿಸಲು ಇಲಾಖೆ ಕ್ರಮ
ಬೆಂಗಳೂರು ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇದಲ್ಲದೆ, ಹೆಚ್ಚುವರಿಯಾಗಿ 2,500 ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಲಾಗಿದೆ. ಈ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಹಂಪಿನಗರದ ನಗರ ಕೇಂದ್ರ ಗ್ರಂಥಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಗ್ರಂಥಪಾಲಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು 72 ಸಾವಿರಕ್ಕೂ ಹೆಚ್ಚು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಂಡಿದೆ. ಅನುಮೋದನೆ ದೊರೆತರೆ ಶಿಕ್ಷಣ ಇಲಾಖೆಯಲ್ಲೇ ಸುಮಾರು 18ರಿಂದ 19 ಸಾವಿರ ಖಾಲಿ ಹುದ್ದೆಗಳ ಭರ್ತಿ ಆಗಲಿದೆ ಎಂದು ತಿಳಿಸಿದರು.
ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಮುಖ್ಯ ಗ್ರಂಥಪಾಲಕರ ಹುದ್ದೆಗಳನ್ನು ಶೀಘ್ರದಲ್ಲಿಯೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಭರ್ತಿ ಮಾಡಲಾಗುವುದು
ಇಡೀ ದಿನ ಕಾರ್ಯನಿರ್ವಹಿಸುವ ಗ್ರಂಥಾಲಯ:
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ವಿಶೇಷವಾಗಿ ಬೆಂಗಳೂರು, ಧಾರವಾಡ ಮತ್ತು ಮೈಸೂರು ನಗರಗಳಲ್ಲಿ ಹೆಚ್ಚಿನ ಸಂಖ್ಯೆಯ ಸ್ಪರ್ಧಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಿನದ 24 ಗಂಟೆಯೂ ಓದಲು ಸಾಧ್ಯವಾಗುವ ಗ್ರಂಥಾಲಯಗಳನ್ನು ಸ್ಥಾಪಿಸಲು ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.
ಪ್ರತಿ ಪುಟ ಮುದ್ರಣಕ್ಕೆ 50 ಪೈಸೆ ಹೆಚ್ಚಳ
ಮುದ್ರಣ ಇಲಾಖೆಯ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ. ಕಳೆದ 10 ವರ್ಷಗಳಿಂದ ಪುಸ್ತಕಗಳ ಪುಟಗಳ ಮುದ್ರಣ ದರದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ. ಇದೀಗ ಪ್ರತಿ ಪುಟದ ಮುದ್ರಣ ದರವನ್ನು 50 ಪೈಸೆ ಹೆಚ್ಚಿಸಲಾಗುವುದು ಎಂದು ಸಚಿವರು ಘೋಷಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಗ್ರಂಥಾಲಯ ಇಲಾಖೆ ಆಯುಕ್ತೆ ವಿದ್ಯಾಕುಮಾರಿ ಕೆ. ಉಪಸ್ಥಿತರಿದ್ದರು.