ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್
ಬೆಂಗಳೂರು: ಜೂನ್ 3ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಗೆ ಆಹ್ವಾ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ರೇಸ್ ಕೋರ್ಸ್ ರಸ್ತೆ ಬಳಿ ಉದ್ದೇಶಿತ ಕಾಂಗ್ರೆಸ್ ಭವನ ನಿರ್ಮಾಣ ಜಾಗಕ್ಕೆ ಭಾನುವಾರ ಭೇಟಿ ನೀಡಿದ ಅವರು, ಪ್ರಮಾಣವಚನ ಕಾರ್ಯಕ್ರಮಕ್ಕೆ ಪಕ್ಷದ ಎಲ್ಲ ಬ್ಲಾಕ್ ಮತ್ತು ಜಿಲ್ಲಾ ಅಧ್ಯಕ್ಷರು, ಶಾಸಕರು ಹಾಗೂ ಮಾಜಿ ಶಾಸಕರು, ಪಕ್ಷದ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಸಂಸದರು, ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಿಗೆ ಆಹ್ವಾನ ನೀಡಲಾಗುವುದು. ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ. ಕಾರ್ಯಕರ್ತರು ಕ್ಷಮಿಸಬೇಕು. ಅಲ್ಲಿ ಜಾಗದ ಕೊರತೆ ಇರುವುದರಿಂದ ಆಹ್ವಾನಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ರಾಹುಲ್ ಗಾಂಧಿಗೆ ಇನ್ನಷ್ಟೇ ನೀಡಲಾಗುವುದು. ಮಾಜಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕಚೇರಿ ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆ ನಡೆಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಜಾಗದಲ್ಲಿ ಎಲ್ಇಡಿ ಪರದೆಗಳ ಅಳವಡಿಸಿ, ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ನಮಗಾಗಿ ಹೋರಾಟ ಮಾಡಿ, ಶ್ರಮಿಸಿದ ನಾಯಕರಿಗೆ ಇಷ್ಟಾದರೂ ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು. 100 ಕಚೇರಿಗಳ ಶಂಕುಸ್ಥಾಪನೆ ಬಗ್ಗೆ ಸುದ್ದಿಗಾರರು ಕೇಳಿದಾಗ, ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದರು.