ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ(ಮೇ.21,22) ಗುಡುಗು-ಮಿಂಚಿನೊಂದಿಗೆ ಮಳೆಯಾಗುವ(Rain Alert) ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ನಗರದಲ್ಲಿ ಈಗಾಗಲೇ ಮಳೆ ಚಟುವಟಿಕೆ ಹೆಚ್ಚಾಗಿದ್ದು, ಮುಂದಿನ 24 ರಿಂದ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ವರದಿ ಪ್ರಕಾರ, ಬೆಂಗಳೂರಿನಲ್ಲಿ ಮಧ್ಯಾಹ್ನ ಹಾಗೂ ಸಂಜೆ ವೇಳೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಬಹುದು. ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.
ನಗರದಲ್ಲಿ ಗರಿಷ್ಠ ತಾಪಮಾನ ಸುಮಾರು 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಅಂದಾಜಿಸಲಾಗಿದೆ. ಮಳೆಯ ಪರಿಣಾಮ ಬೆಂಗಳೂರಿನ ಹಲವೆಡೆ ತಂಪಾದ ವಾತಾವರಣ ನಿರ್ಮಾಣವಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಮಂಡ್ಯ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು IMD ಎಚ್ಚರಿಕೆ ನೀಡಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ.
ಹವಾಮಾನ ತಜ್ಞರ ಪ್ರಕಾರ, ಮುಂಗಾರು ಪೂರ್ವ ಮಳೆ ಚಟುವಟಿಕೆ ರಾಜ್ಯದಲ್ಲಿ ತೀವ್ರಗೊಂಡಿದೆ. ಇದೇ ಕಾರಣಕ್ಕೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಕೆಲ ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ,(ಏಜೆನ್ಸೀಸ್).