ಶಿಕ್ಷೆ 
ರಾಜ್ಯ

ಅತ್ಯಾಚಾರಿಗೆ 30 ವರ್ಷ ಶಿಕ್ಷೆ

ಧರ್ಮರಾಜ ರಾಮನಗೌಡ ಪಾಟೀಲ
ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿ ಹುಕ್ಕೇರಿ ತಾಲೂಕಿನ ಸಂಕೇಶ್ವರದ ದರ್ಶನ ಹುಣಶ್ಯಾಳಿ (23)ಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.
ಅಪ್ರಾಪ್ತೆ ಜತೆಗೆ ಪ್ರೀತಿಸುವ ನಾಟಕವಾಡಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿ, ಜೀವ ಬೆದರಿಕೆಯೊಡ್ಡಿದ ಕುರಿತು 2024ರಲ್ಲಿ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖಾಧಿಕಾರಿ ಎಸ್.ಎಂ.ಅವಜಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಶೇಷ ಶೀಘ್ರಗತಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ತೀರ್ಪು ನೀಡಿದ್ದಾರೆ. ನೊಂದ ಅಪ್ರಾಪ್ತೆಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಲಾಗಿದೆ. ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.