ನೌಕರರ ಕೆಲಸದ ಒತ್ತಡ ಕಡಿಮೆ ಮಾಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ಸರ್ಕಾರಿ ನೌಕರರ ಸಂಘದಿಂದ ಉಪವಿಭಾಗಾಧಿಕಾರಿ ಮಂಜುನಾಥ ಅವರಿಗೆ ಮನವಿ ಸಲ್ಲಿಸಲಾಯಿತು. ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಧನಂಜಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ರೆಡ್ಡಿ, ಮುಖ್ಯಶಿಕ್ಷಕ ಸಂಘದ ಅಧ್ಯಕ್ಷ ಸಿದ್ದಗಂಗಯ್ಯ, ಪ್ರಾ.ಶಾ.ಶಿ.ಸ. ಜಿಲ್ಲಾಧ್ಯಕ್ಷ ಆಂಜಿನಪ್ಪ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅರುಣ್, ತಾಲೂಕು ಅಧ್ಯಕ್ಷ ಶಿವಕುಮಾರ್ ಇದ್ದರು.
ದೊಡ್ಡಬಳ್ಳಾಪುರ : ನೌಕರರ ಕೆಲಸದ ಒತ್ತಡವನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ಸರ್ಕಾರಿ ನೌಕರರ ಸಂಘದಿಂದ ನಗರದ ತಾಲೂಕು ಕಚೇರಿ ಆವರಣದಲ್ಲಿ ಉಪವಿಭಾಗಾಧಿಕಾರಿ ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಜಶೇಖರ್ ಮಾತನಾಡಿ, ಸರ್ಕಾರದ ಎಲ್ಲ ಕೆಲಸಗಳನ್ನು ಸರ್ಕಾರಿ ನೌಕರರು ನೆರವೇರಿಸುತ್ತಿದ್ದಾರೆ. ಆದರೆ, ಕೆಲವೊಂದು ಸಂದರ್ಭಗಳಲ್ಲಿ ವಿನಾಕಾರಣ ಮೇಲಧಿಕಾರಿಗಳ ಕೆಲಸ ಇಂದೇ ಮುಗಿಸಬೇಕು ಎಂಬ ಒತ್ತಡದಿಂದ ನೌಕರರು ಮಾನಸಿಕ ಅಘಾತಕ್ಕೆ ಒಳಗಾಗಿ ಮೃತಪಡುತ್ತಿರುವ ಘಟನೆಗಳು ನಡೆಯುತ್ತಿವೆ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲ 31 ಕಂದಾಯ ಜಿಲ್ಲೆ, 03 ಶೈಕ್ಷಣಿಕ ಜಿಲ್ಲೆ ಹಾಗೂ 183 ತಾಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದ್ದು, 6 ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆ. ರಾಜ್ಯದಲ್ಲಿ 2.92 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯದ ಜತೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿಎಸ್ಟಿ ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ ಎಂದರು.
ಇತ್ತೀಚಿಗೆ ತುಮಕೂರಿನಲ್ಲಿ ಎಸ್ಐಆರ್ ಕಾರ್ಯಕ್ಕೆ ತೆರಳುತ್ತಿದ್ದ ವೇಳೆ ಗ್ರಾಮಾಡಳಿತಾಧಿಕಾರಿ ಭುವನಾ ಮೃತಪಟ್ಟಿರುವುದು ಹಾಗೂ ರಾಜ್ಯದ ಹಲವಾರು ಭಾಗಗಳಲ್ಲಿ ಎಸ್ಐಆರ್ ಕಾರ್ಯದಿಂದ ಆಗುತ್ತಿರುವ ಹಲವಾರು ಅಹಿತಕರ ಘಟನೆಗಳು ಪ್ರತಿನಿತ್ಯ ಪ್ರಸಾರವಾಗುತ್ತಿರುವುದರಿಂದ ತಾಲೂಕಿನ ನೌಕರರು ಭೀತಿ ಜತೆಗೆ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ತಾಲೂಕಿನ ನೌಕರರಿಗೆ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಒತ್ತಡ ಮುಕ್ತ ವಾತಾವರಣವನ್ನು ನಿರ್ಮಿಸಿಕೊಡುವುದರ ಜತೆಗೆ ಸಾರ್ವಜನಿಕರಿಂದಲೂ ಕರ್ತವ್ಯನಿರತ ಸಿಬ್ಬಂದಿಗೆ ಯಾವುದೇ ರೀತಿಯಲ್ಲೂ ತೊಂದರೆ, ದೌರ್ಜನ್ಯಗಳು ಆಗದಂತೆ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಎನ್ಪಿಎಸ್ ಸಂಘದ ಚನ್ನಕೇಶವ ಮೂರ್ತಿ, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಅಂಬರೀಶ್, ಪದವೀಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್, ರಾಜ್ಯ ಪರಿಷತ್ ಸದಸ್ಯ ಹರೀಶ್, ಖಜಾಂಜಿ ಗಂಗಬೈರಪ್ಪ, ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಕೇಶವಮೂರ್ತಿ, ಜಿಲ್ಲಾ ಉಪಾಧ್ಯಕ್ಷೆ ನಂಜಾಂಬಿಕೆ, ತಾಲೂಕು ಉಪಾಧ್ಯಕ್ಷ ಮಂಜುನಾಥ ಇದ್ದರು.