DK Shivakumar | ಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಹೈ-ಲೆವೆಲ್ ಮೀಟಿಂಗ್!
ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಮೀಪ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಬುಧವಾರ ಉನ್ನತ ಮಟ್ಟದ ಮಹತ್ವದ ಸಭೆ ನಡೆಯಿತು.
ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿಎಂ ಡಿ ಕೆ ಶಿವಕುಮಾರ್, ಬೆಂಗಳೂರಿನ ಎರಡನೇ ಏರ್ಪೋರ್ಟ್ ಕುರಿತು ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಲಾಗಿದೆ. ತಾಂತ್ರಿಕವಾಗಿ ಸಾಧ್ಯತೆ ಇರುವ ಪ್ರದೇಶಗಳಲ್ಲೇ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಮೀನು ಭೂಸ್ವಾಧೀನದ ವೆಚ್ಚ ಹಾಗೂ ಲ್ಯಾಂಡ್ ದರ ಕಡಿಮೆಯಿರಬೇಕು. ಒಂದೆರಡು ಮನೆಗಳಿದ್ದರೆ ತೊಂದರೆಯಿಲ್ಲ, ಅವರಿಗೂ ಸರಿಯಾದ ಪರಿಹಾರ ಒದಗಿಸಲಾಗುವುದು. ಆದರೆ ಹೆಚ್ಚು ಜನವಸತಿ ಹಾಗೂ ಊರುಗಳಿರುವ ಪ್ರದೇಶಗಳನ್ನು ಹೊರತುಪಡಿಸಿ, ಖಾಲಿ ಪ್ರದೇಶಗಳನ್ನು ಗುರುತಿಸಲು ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಸದ್ಯ ದಕ್ಷಿಣ ಭಾಗದಲ್ಲಿಯೇ ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇನ್ನು ಯಾವುದೇ ನಿರ್ದಿಷ್ಟ ಜಾಗ ಅಂತಿಮಗೊಂಡಿಲ್ಲ. ತಾಂತ್ರಿಕ ವರದಿಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಈ ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.