ಸಿದ್ದಾಪುರ ಪಂಚಾಯಿತಿ ಸಭಾಂಗಣದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಸಿಪಿಐ(ಎಂ) ವತಿಯಿಂದ ಆಯೋಜಿಸಿದ್ದ ಎಸ್‌ಐಆರ್ ಕುರಿತು ವಿಚಾರ ಸಂಕಿರಣ. 
ರಾಜ್ಯ

ಎಸ್‌ಐಆರ್ ನೈಜ ಮತದಾರರನ್ನು ಹೊರಗಿಡುವ ಷಡ್ಯಂತ್ರ

ಸಿದ್ದಾಪುರ: ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ನೈಜ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಹುನ್ನಾರವಾಗಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದ ಕ್ರಮ ಎಂದು ಸಿಪಿಐ(ಎಂ) ಹಾಸನ ಜಿಲ್ಲಾ ಕಾರ್ಯದರ್ಶಿ ಎಚ್.ಆರ್. ನವೀನ್ ಕುಮಾರ್ ಆರೋಪಿಸಿದರು.
ಸಿದ್ದಾಪುರ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಸಿಪಿಐ(ಎಂ) ವತಿಯಿಂದ ಆಯೋಜಿಸಿದ್ದ ಎಸ್‌ಐಆರ್ ಕುರಿತು ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಬಡವರು, ಕಾರ್ಮಿಕರು, ದಲಿತರು ಹಾಗೂ ಅಲ್ಪಸಂಖ್ಯಾತರ ಮತದಾನದ ಹಕ್ಕನ್ನು ಕಸಿಯುವ ಉದ್ದೇಶದಿಂದ ಈ ಪ್ರಕ್ರಿಯೆ ಜಾರಿಗೊಳಿಸಲಾಗುತ್ತಿದೆ ಎಂದು ಅವರು ದೂರಿದರು. ಜನಸಾಮಾನ್ಯರಿಗೆ ಸುಲಭವಾಗಿ ಲಭ್ಯವಾಗುವ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಅಥವಾ ಪಾಸ್‌ಪೋರ್ಟ್‌ಗಳನ್ನು ಪೌರತ್ವ ದಾಖಲಾತಿಯಾಗಿ ಪರಿಗಣಿಸದೆ, ಬೇರೆ ದಾಖಲೆಗಳನ್ನು ಒದಗಿಸುವಂತೆ ಒತ್ತಾಯಿಸುವುದು ಪ್ರಜಾಪ್ರಭತ್ವ ವಿರೋಧಿ ನಡೆ ಎಂದು ಟೀಕಿಸಿದರು.
ಸರ್ಕಾರಗಳು ಮತ್ತು ಚುನಾವಣಾ ಆಯೋಗ ಈ ಕುರಿತು ಹೊಣೆಗಾರಿಕೆ ವಹಿಸಿ, ಯಾವುದೇ ನೈಜ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಕ್ರಮ ಕೈಗೊಳ್ಳಬೇಕು. ಹೊಸ ಮತದಾರರನ್ನು ಪಟ್ಟಿಗೆ ಸೇರಿಸುವ ಕೆಲಸಕ್ಕೆ ಆದ್ಯತೆ ನೀಡಬೇಕೇ ಹೊರತು, ಈಗಾಗಲೇ ಇರುವ ಮತದಾರರನ್ನು ಕೈಬಿಡಬಾರದು ಎಂದು ಅವರು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಎಚ್.ಬಿ. ರಮೇಶ್, ಜಿಲ್ಲಾ ಸಮಿತಿ ಸದಸ್ಯರಾದ ಎನ್.ಡಿ. ಕುಟ್ಟಪ್ಪ, ಪಿ.ಆರ್. ಭರತ್, ಕೆ.ಎಸ್. ರಮೇಶ್, ಎಸ್. ಬೈಜು, ಪದ್ಮಿನಿ ಶ್ರೀಧರ್, ಜೆ.ಆರ್. ಪ್ರೇಮ, ಅನಿಲ್, ಉದಯ, ಮುಸ್ತಫಾ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.