ತಾರತಮ್ಯ ತೊಲಗಿಸಲು ಸಾಮಾಜಿಕ ನ್ಯಾಯ ಅಗತ್ಯ Social justice
ಕೆಜಿಎಫ್: ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದ್ದು, ಇವುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯ ಅಗತ್ಯವಾಗಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ರಾಜಗೋಪಾಲಗೌಡ ತಿಳಿಸಿದರು. social justice
ತಾಲೂಕಿನ ಕಮ್ಮಸಂದ್ರ ಗ್ರಾಮ ಪಂಚಾಯಿತಿಯಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯಲ್ಲಿ ಮಾತನಾಡಿ, ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅದನ್ನು ಸಂಪೂರ್ಣವಾಗಿ ಕಿತ್ತುಹಾಕಲು ಪ್ರತಿ ವರ್ಷ ಫೆ.20ರಂದು ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಿಸಲಾಗುತ್ತದೆ ಎಂದರು.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 2007ರ ಫೆ.20ರಂದು ಈ ದಿನವನ್ನು ಅಂಗೀಕರಿಸಲಾಯಿತು ಎಂದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜ್ಯೋತಿ ಬಸು ಮಾತನಾಡಿ, ಸುಸ್ಥಿರ ಅಭಿವೃದ್ಧಿ, ಬಡತನ ನಿಮೂರ್ಲನೆ, ಪೂರ್ಣ ಉದ್ಯೋಗ, ಯೋಗ್ಯ ಕೆಲಸದ ಪ್ರಚಾರ, ಸಾರ್ವತ್ರಿಕ ಸಾಮಾಜಿಕ ರಕ್ಷಣೆ, ಲಿಂಗ ಸಮಾನತೆ, ಸಾಮಾಜಿಕ ಯೋಗಕ್ಷೇಮ ಹಾಗೂ ಎಲ್ಲರಿಗೂ ನ್ಯಾಯ ದೊರಕುವ ಪರಿಹಾರಗಳನ್ನು ಹುಡುಕುವ ಅಂತಾರಾಷ್ಟ್ರೀಯ ಸಮುದಾಯವನ್ನು ಒಗ್ಗೂಡಿಸುವ ಸಲುವಾಗಿ ಈ ದಿನವೂ ಮಹತ್ವದ್ದಾಗಿದೆ ಎಂದು ಹೇಳಿದರು.
ಸಿಡಿಪಿಒ ರಾಜೇಶ್ ಮಾತನಾಡಿ, ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಬಗ್ಗೆ ಉಲ್ಲೇಖವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಮಾನ್ಯತೆ ನೀಡಿದಾಗ ಮಾತ್ರ ಸಮಾನತೆ ತರಲು ಕಾರಣವಾಗುತ್ತದೆ ಎಂದರು.