ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಕೆಂಪಯ್ಯನಹಟ್ಟಿಯಲ್ಲಿ ಗ್ರಾಮಸ್ಥರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
- ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ
- ಕೆಂಪಯ್ಯನಹಟ್ಟಿ ಗ್ರಾಮಸ್ಥರು
ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮಸ್ಥರು ಸೋಮವಾರ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಕುಡಿಯುವ ನೀರನ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಾತ್ರಿಯೇ ಬೋರ್ ಲಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿ ಪಿಡಿಒ ಸೆಲ್ವರಾಜ್ ಅವರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರತಿಭಟನೆ ಮುಂದುವರಿದಿತ್ತು. ಮುಂಜಾನೆ ಖಾಲಿ ಬಿಂದಿಗೆಯೊಂದಿಗೆ ಮುಖ್ಯ ರಸ್ತೆಗೆ ಆಗಮಿಸಿದ ಮಹಿಳೆಯರು ಹಾಗೂ ಗ್ರಾಮಸ್ಥರು ರಸ್ತೆಗೆ ಅಡ್ಡಲಾಗಿ ಕಲ್ಲನ್ನಿಟ್ಟು ಸಂಚಾರ ತಡೆದು ಪ್ರತಿಭಟಿಸಿದರು.
ಈ ವೇಳೆ ಪ್ರತಿಭಟನಕಾರರು ಮಾತನಾಡಿ, ಗ್ರಾಮದಲ್ಲಿ ಕಳೆದ ಹಲವು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು, ಇದೀಗ ತೀವ್ರವಾಗಿದೆ. ಈ ಬಗ್ಗೆ ಗ್ರಾಪಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮವಾಗಿಲ್ಲ. ಇದರಿಂದ ಕುಡಿಯುವ ನೀರಿಗೆ ತುಂಬಾ ತೊಂದರೆ ಅನುಭವಿಸುತ್ತಿದ್ದೇವೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಸ್ಥಳಕ್ಕೆ ತಾಪಂ ಇಒ ಉಮೇಶ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಧನ್ವನಾಗ್ ಅವರು ಆಗಮಿಸಿ ಕೂಡಲೇ ಬೋರ್ ಕೊರೆಯಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು.