ರಾಜ್ಯದಲ್ಲಿ ಮುಂದಿನ 5 ದಿನ ಲಘು ಪ್ರಮಾಣದಲ್ಲಿ ಮಳೆ
ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ 2 ವಾರ ಕಳೆದರೂ ಮಾರುತಗಳು ಪ್ರಬಲಗೊಳ್ಳಲು ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಪೂರಕ ವಾತಾವರಣ ಇಲ್ಲವಾಗಿದೆ.
ಕೆಲ ಪ್ರದೇಶ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗದಿರುವ ಕಾರಣ ಜೂ.1ರಿಂದ 19ವರೆಗೆ ರಾಜ್ಯಾದ್ಯಂತ ಶೇ.37 ಮಳೆ ಕುಂಠಿತವಾಗಿದೆ. ಕರಾವಳಿ ಮತ್ತು ಮಲೆನಾಡು ಸೇರಿ ಉತ್ತರ ಕರ್ನಾಟಕದ ಭಾಗದಲ್ಲಿ ಮಳೆ ಅಭಾವ ತೀವ್ರವಾಗಿದೆ.
ಕೆಲ ಭಾಗಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನ ಲಘು ಪ್ರಮಾಣದಲ್ಲಿ ಮಳೆ ಬೀಳಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿಯಲ್ಲಿ ಜೂ 20ರಿಂದ ಜೂ 25ವರೆಗೆ ಸಾಧಾರಣ ಮಳೆ ಸುರಿಯಲಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 3 ದಿನ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.