Strengthen laws for women's safety. 
ರಾಜ್ಯ

ಮಹಿಳಾ ಸುರಕ್ಷತೆಗೆ ಕಾನೂನು ಬಲಪಡಿಸಲಿ

ಮುಳಬಾಗಿಲು: ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಹಿಂಸೆ, ದೌರ್ಜನ್ಯ, ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಇನ್ನಷ್ಟು ಕಾನೂನು ಬಲಪಡಿಸಿ ಮಹಿಳೆಯರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೊನ್ನಶೆಟ್ಟಹಳ್ಳಿ ಗ್ರಾಮೀಣ ಮಹಿಳಾ ಒಕ್ಕೂಟದ ಕಾರ್ಯದರ್ಶಿ ಎಂ.ಜಿ. ಪಾಪಮ್ಮ ತಿಳಿಸಿದರು.
ಜು.14ರಂದು ಬೆಂಗಳೂರಿನಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷಿ$್ಮ ಚೌಧರಿ ಅವರಿಗೆ ಆಯೋಗದ ಕಾರ್ಯದರ್ಶಿ ಮೂಲಕ ಮನವಿ ಸಲ್ಲಿಸಿ ಮಾತನಾಡಿ, ಮಹಿಳೆಯರ ರಕ್ಷಣೆಗಾಗಿ ಹಲವು ಕಾನೂನುಗಳಿದ್ದರೂ ಸಮರ್ಪಕ ಅನುಷ್ಠಾನದ ಕೊರತೆಯಿಂದ ದೌರ್ಜನ್ಯ ಪ್ರಕರಣ ಮುಂದುವರಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.
ಪರವಾನಗಿ ಇಲ್ಲದೆ ಗ್ರಾಮಗಳಲ್ಲಿನ ಅಂಗಡಿ ಮುಂಗಟ್ಟುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾರಾಯಿ ಅಂಗಡಿಗಳನ್ನು ತೆರವುಗೊಳಿಸಿ, ಪ್ರತಿ ತಾಲೂಕು ಮಟ್ಟದಲ್ಲಿ ಮಹಿಳಾ ಬ್ಯಾಂಕ್​ ಸ್ಥಾಪಿಸಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಒಕ್ಕೂಟದ ಅಧ್ಯಕ್ಷೆ ಎಚ್​.ಎಂ.ಲಕ್ಷ$್ಮಮ್ಮ ಮಾತನಾಡಿ, ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಕಡ್ಡಾಯವಾಗಿ ಜಾರಿಯಾಗುವಂತೆ ರಾಜ್ಯ ಮಹಿಳಾ ಆಯೋಗ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಕಾವಲು ಸಮಿತಿ, ಸಾಮಾಜಿಕ ಸ್ಥಾಯಿ ಸಮಿತಿ ಬಲಪಡಿಸಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ರಕ್ಷಣೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಹಿಳೆಯರು ಹಾಗೂ ಮಕ್ಕಳ ವಾರ್ಡ್​ ಸಭೆಗಳನ್ನು ಕಡ್ಡಾಯವಾಗಿ ನಡೆಸಿ, ಸಮಸ್ಯೆಗಳಿಗೆ ಸ್ಥಳಿಯ ಮಟ್ಟದಲ್ಲಿಯೇ ಪರಿಹಾರ ಕಲ್ಪಿಸುವ ವ್ಯವಸ್ಥೆ ರೂಪಿಸಬೇಕು. ಒಕ್ಕೂಟ ಸಲ್ಲಿಸಿರುವ ಬೇಡಿಕೆಗಳನ್ನು ಪರಿಗಣಿಸಿ ರಾಜ್ಯ ಮಹಿಳಾ ಆಯೋಗ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದರು.