Strive to keep the environment green. 
ರಾಜ್ಯ

ಪರಿಸರ ಹಸಿರಾಗಿಡಲು ಶ್ರಮಿಸಿ

ಹುಳಿಯಾರು: ಹೋಬಳಿಯ ಗಾಣದಾಳು ವಲಯದ ಸೋಮನಹಳ್ಳಿ ಕಾರ್ಯಕ್ಷೇತ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅಧ್ಯಕ್ಷತೆವಹಿಸಿದ್ದ ಮುಖ್ಯಶಿಕ್ಷಕ ಯಲ್ಲಪ್ಪ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಶಾಲಾ ಆವರಣ ಮತ್ತು ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಟ್ಟುಕೊಳ್ಳಲು ಮಕ್ಕಳು ಶ್ರಮಿಸಬೇಕು. ಪರಿಸರ ಕಾಳಜಿ ಹೊಂದಿರುವ ವ್ಯಕ್ತಿಗಳು ನಮಗೆ ಪ್ರೇರಣೆಯಾಗಬೇಕು ಎಂದರು.\
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಾಣದಾಳು ವಲಯ ಮೇಲ್ವಿಚಾರಕಿ ಶಕುಂತಲಾ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ಮಕ್ಕಳ ಪಾತ್ರ ಅತ್ಯಂತ ದೊಡ್ಡದಾಗಿದೆ. ಪ್ರಕೃತಿಯನ್ನು ಉಳಿಸಿದರೆ ಮಾತ್ರ ಮಾನವನ ಉಳಿವು ಸಾಧ್ಯ ಎಂದರು.
ಕಾರ್ಯಕ್ರಮದ ಅಂಗವಾಗಿ ಸ್ಥಳಿಯ ಕೆರೆಯಂಗಳದಲ್ಲಿ ಗಿಡಗಳನ್ನು ನಾಟಿ ಮಾಡಲಾಯಿತು. ಶಿಕ್ಷಕಿ ಸವಿತಾ ಅವರು ಪರಿಸರ ಮಾಲಿನ್ಯದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಪರಿಸರ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಹಾಗೂ ಪರಿಸರದ ಎಲೆ ಗುರುತಿಸುವ ವಿಶಿಷ್ಟ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ಅತ್ಯುತ್ತಮವಾಗಿ ಪ್ರದರ್ಶನ ನೀಡಿದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.