ಅರಕಲಗೂಡಿನಲ್ಲಿ ತಾಪಂ ಆಡಳಿತಾಧಿಕಾರಿ ಎಂ.ಸಿ.ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಆಯೋಜಿಸಲಾಗಿತ್ತು. ಇಒ ಶ್ರೀನಿವಾಸ್ ಇತರರಿದ್ದರು. 
ರಾಜ್ಯ

ಸಮಸ್ಯೆಗಳ ಪರಿಹಾರಕ್ಕಾಗಿ ಅಗತ್ಯ ಕ್ರಮ ವಹಿಸಿ

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್
  • ತಾಲೂಕು ಪಂಚಾಯಿತಿ ಸಭಾಂಗಣ
ಅರಕಲಗೂಡು: ಮುಂಗಾರು ವೈಫಲ್ಯದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಕುಡಿಯುವ ನೀರು ಸೇರಿದಂತೆ ಮಳೆ ಕೊರತೆಯಿಂದ ಎದುರಾಗುವ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಎಂ.ಸಿ.ಚಂದ್ರಶೇಖರ್ ಸೂಚನೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಟ್ಟಣ ಪಂಚಾಯಿತಿ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಆಡಳಿತಾಧಿಕಾರಿಗಳು ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವುದರ ಜತೆಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಮುಖ್ಯವಾಗಿ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಆಗದಿರುವುದು ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಮೇ ಹಾಗೂ ಜೂನ್‌ನಲ್ಲಿ ಸುರಿದ ಅಲ್ಪ ಪ್ರಮಾಣದ ಮಳೆಯನ್ನು ಅವಲಂಬಿಸಿ ಸಣ್ಣ ಮತ್ತು ಅತಿ ಸಣ್ಣ ರೈತರು ವಿವಿಧ ಬೆಳೆಗಳನ್ನು ಬಿತ್ತನೆ ಮಾಡಿದ್ದಾರೆ. ಆದರೆ ನಂತರ ಸಮರ್ಪಕ ಮಳೆ ಸುರಿಯದ ಕಾರಣ ಬೆಳೆಗಳು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಕೃಷಿ ಚೇತರಿಸಿಕೊಳ್ಳುವುದರ ಜತೆಗೆ ಕುಡಿಯುವ ನೀರಿನ ಸಮಸ್ಯೆಯೂ ತಗ್ಗುವ ಸಾಧ್ಯತೆ ಇದೆ. ಆದರೆ ಹವಾಮಾನದ ಬಗ್ಗೆ ಈಗಲೇ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಇಲಾಖೆಯೂ ಮುಂದಿನ ಆಗುಹೋಗುಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು. ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಈಗಿನಿಂದಲೇ ಸಮರ್ಪಕ ಯೋಜನೆ ರೂಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಿ: 2025-26ನೇ ಸಾಲಿನ ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನ ತೃಪ್ತಿಕರವಾಗಿ ನಡೆದಿರುವುದಾಗಿ ಮೆಚ್ಚುಗೆ ವ್ಯಕ್ತಪಡಿಸಿದ ಚಂದ್ರಶೇಖರ್, ಈಗಾಗಲೇ 2026-27ನೇ ಸಾಲಿನ ಯೋಜನೆಗಳು ಆರಂಭಗೊಂಡಿದ್ದು, ಇಲಾಖೆವಾರು ಬಿಡುಗಡೆಯಾಗುವ ಅನುದಾನವನ್ನು ಸಕಾಲದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸೂಚಿಸಿದರು.
ಕಳೆದ ಸಾಲಿನಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಶೀಘ್ರ ಪೂರ್ಣಗೊಳಿಸಬೇಕು. ಕಾಮಗಾರಿಗಳ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ ಜನರಿಗೆ ಪ್ರಯೋಜನವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಹುತೇಕ ಮಕ್ಕಳು ರೈತ ಹಾಗೂ ಬಡವರಾಗಿದ್ದಾರೆ. ಅವರಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಸರ್ಕಾರದ ಎಲ್ಲ ಸೌಲಭ್ಯಗಳು ಸಮರ್ಪಕವಾಗಿ ದೊರೆಯಬೇಕು. ಶಿಕ್ಷಣದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಹೇಳಿದರು.
ಶಾಲೆಗಳಲ್ಲಿ ಕುಡಿಯುವ ನೀರು, ಶೌಚಗೃಹ ವ್ಯವಸ್ಥೆ, ತರಗತಿ ಕೊಠಡಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಬಿಆರ್‌ಸಿ ಅಧಿಕಾರಿಗಳು ಕಡ್ಡಾಯವಾಗಿ ಕ್ರಮವಹಿಸಬೇಕು. ಮಕ್ಕಳಿಗೆ ಯಾವುದೇ ರೀತಿಯ ವಂಚನೆ ಆಗದಂತೆ ಶಿಕ್ಷಣ ಇಲಾಖೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಇದಕ್ಕೆ ಪ್ರತಿಕ್ರಿಯಿಸಿದ ಚಂದ್ರಶೇಖರ್, ವೈದ್ಯರ ಕೊರತೆ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಇರುವ ವೈದ್ಯರ ಮೂಲಕವೇ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಪುಷ್ಪಲತಾ ಮಾತನಾಡಿ, ತಾಲೂಕಿನ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಲ್ಲದ ಕಾರಣ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಇರುವ ವೈದ್ಯರ ಮೇಲೆಯೇ ಹೆಚ್ಚುವರಿ ಜವಾಬ್ದಾರಿ ಹಾಕಲಾಗಿದೆ. ಅಗತ್ಯ ಸಂಖ್ಯೆಯಲ್ಲಿ ವೈದ್ಯರನ್ನು ನೇಮಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಭೆಯ ಗಮನಕ್ಕೆ ತಂದರು.
ಪಟ್ಟಣದಲ್ಲಿ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಕಾಲೇಜು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಮೂಲ ಸೌಲಭ್ಯಗಳ ಕೊರತೆ ಇರುವ ಕುರಿತು ದೂರುಗಳು ಕೇಳಿಬಂದಿವೆ ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಈ ಹಿನ್ನೆಲೆಯಲ್ಲಿ ಈಗಾಗಲೇ ನಿರ್ಮಾಣ ಹಂತದಲ್ಲಿರುವ ಸ್ವಂತ ಕಟ್ಟಡದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ವಿದ್ಯಾರ್ಥಿನಿಯರಿಗೆ ಸುರಕ್ಷಿತ ಹಾಗೂ ಉತ್ತಮ ವಾತಾವರಣ ಕಲ್ಪಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗೈರಾದ ಅಧಿಕಾರಿಗಳಿಗೆ ನೋಟಿಸ್: ಸಭೆಗೆ ಗೈರಾಗಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಚಂದ್ರಶೇಖರ್, ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ತಾಲೂಕು ಪಂಚಾಯಿತಿ ಇಒಗೆ ನಿರ್ದೇಶನ ನೀಡಿದರು.
ಮುಂದಿನ ಸಾಮಾನ್ಯ ಸಭೆಗೆ ಪ್ರತಿ ಇಲಾಖೆಯೂ ಸಮಗ್ರ ಅಭಿವೃದ್ಧಿ ಪ್ರಗತಿ ವರದಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಬಾಕಿ ಉಳಿದಿರುವ ಕಾಮಗಾರಿಗಳ ಪೂರ್ಣಗೊಂಡ ವಿವರಗಳೂ ವರದಿಯಲ್ಲಿ ಒಳಗೊಂಡಿರಬೇಕು. ಸಭೆಗಳಿಗೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವ ಮೂಲಕ ಆಡಳಿತ ವ್ಯವಸ್ಥೆಗೆ ಸಹಕರಿಸಬೇಕು ಎಂದು ಎಚ್ಚರಿಕೆ ನೀಡಿದರು.
ತಾಲೂಕು ಪಂಚಾಯಿತಿ ಇಒ ಶ್ರೀನಿವಾಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು, ಇಲಾಖಾವಾರು ಪ್ರಗತಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು.