ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಾವುಗಳ ದಿನಾಚರಣೆಯಲ್ಲಿ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಅಜಿತ್ ಪಾಟೀಲ್, ಉಪನಿರ್ದೇಶಕಿ ಅನುಷಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಕುಮಾರ್, ಡಾ.ಪ್ರಯಾಗ್ ಹಾಗೂ ವಿದ್ಯಾರ್ಥಿಗಳು ಇದ್ದರು.
ಆನೇಕಲ್ : ಹಾವುಗಳ ಸಂರಕ್ಷಣೆ ಹಾಗೂ ಅವುಗಳ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಬುಧವಾರ ವಿಶ್ವ ಹಾವುಗಳ ದಿನ ಆಚರಿಸಲಾಯಿತು.
ಬನ್ನೇರುಘಟ್ಟ ಜೈವಿಕ ಉದ್ಯಾನವನ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ, ವನ್ಯಜಿವಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಅಜಿತ್ ಪಾಟೀಲ್, ಉಪನಿರ್ದೇಶಕಿ ಅನುಷಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಕುಮಾರ್, ಡಾ.ಪ್ರಯಾಗ್, ಮೃಗಾಲಯದ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಹಾವುಗಳ ಕುರಿತು ಮಾರ್ಗದರ್ಶಿತ ಮಾಹಿತಿ ನೀಡಿದರು.
ಭಾರತೀಯ ವಿಜ್ಞಾನ ಸಂಸ್ಥೆಯ ಸಹ ಪ್ರಾಧ್ಯಾಪಕ ಡಾ.ಕಾರ್ತಿಕ್ ಸುನಾಗರ್ ಮಾತನಾಡಿ, ಹಾವುಗಳ ವಿಕಾಸ ಮತ್ತು ವಿಕಸನ ಹಾಗೂ ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಅವುಗಳ ಪಾತ್ರದ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದ ಪ್ರಯುಕ್ತ ಬನ್ನೇರುಘಟ್ಟದ ಶ್ರೀ ಚಂಪಕಧಾಮ ಸ್ವಾಮಿ ಪ್ರೌಢಶಾಲೆ ವಿದ್ಯಾರ್ಥಿಗಳು ಮೃಗಾಲಯದ ಸರೀಸೃಪ ವಿಭಾಗಕ್ಕೆ ಭೇಟಿ ನೀಡಿ ವಿವಿಧ ಜಾತಿಯ ಹಾವುಗಳ ಗುರುತಿಸುವಿಕೆ ಹಾಗೂ ಅವುಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.