ದೊಡ್ಡಬಳ್ಳಾಪುರ :
ಒಂದು ದೇಶ ಅಭಿವೃದ್ಧಿಯತ್ತ ಸಾಗಬೇಕಾದರೆ ಯುವಶಕ್ತಿಯನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶ್ರೀ ದೇವರಾಜ ಅರಸು ಸಮೂಹ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಹೇಳಿದರು.
ತಾಲೂಕಿನ ದೇವರಾಜ ಅರಸು ವ್ಯವಹಾರ ನಿರ್ವಹಣಾಮಹಾವಿದ್ಯಾಲಯದಲ್ಲಿ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಶ್ರೀ ದೇವರಾಜಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಎನ್ನೆಸ್ಸೆಸ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯುವ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಭಾರತ ಅಪಾರ ಯುವ ಸಂಪತ್ತನ್ನು ಹೊಂದಿರುವ ದೇಶ.ವಿದ್ಯಾರ್ಥಿಗಳು ಹಾಗೂ ಯುವಕರು ತಮ್ಮ ಶಕ್ತಿಯನ್ನು ಆರೋಗ್ಯಕರ ಮತ್ತು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಹೇಳಿದರು.
ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪರಮೇಶ್ವರಯ್ಯ ಮಾತನಾಡಿ, ಯುವಜನರ ನಾವೀನ್ಯತೆ, ಉತ್ಸಾಹ ಮತ್ತು ಸಾಮರ್ಥ್ಯಗಳು ದೇಶ ಹಾಗೂ ವಿಶ್ವದ ಪ್ರಗತಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ. ನಿರುದ್ಯೋಗ, ಬಡತನ, ಆರೋಗ್ಯ ಸಮಸ್ಯೆಗಳು ಮತ್ತು ಅಸಮಾನತೆಯಂತಹ ಸವಾಲುಗಳ ಕುರಿತು ಚರ್ಚಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಅಂತಾರಾಷ್ಟ್ರೀಯ ಯುವ ದಿನಾಚರಣೆಯಂತಹ ವೇದಿಕೆಗಳು ಸಹಕಾರಿಯಾಗುತ್ತವೆ ಎಂದರು.
ಸಾರ್ವಜನಿಕ ಆಸ್ಪತ್ರೆಯ ಎಆರ್ಟಿ ಕೇಂದ್ರದ ವೈದ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಅವರು ಎಚ್ಐವಿ ಮತ್ತು ಏಡ್ಸ್ ನಡುವಿನ ವ್ಯತ್ಯಾಸ ಹಾಗೂ ಸಂಬಂಧಿಸಿದ ಆರೋಗ್ಯ ಜಾಗೃತಿ ಕುರಿತು ಮಾಹಿತಿ ನೀಡಿದರು.
ಪ್ರಭಾರ ಜಿಲ್ಲಾ ಮೇಲ್ವಿಚಾರಕ ರಾಜೇಂದ್ರ ಮಾತನಾಡಿ, ಯುವಕರು ಏಡ್ಸ್ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಆರೋಗ್ಯವಂತಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.