ತಾಲೂಕಿನ ಹಳೆ ಉತ್ಪತ್ತನಹಳ್ಳಿಯ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಶಾಸಕ ಎಚ್.ಕೆ.ಸುರೇಶ್ ಭೂಮಿಪೂಜೆ ನೆರವೇರಿಸಿದರು. ನಾಗರಾಜು, ಮಂಜುನಾಥ್, ರವಿ ಇತರರು ಇದ್ದರು.  
ರಾಜ್ಯ

ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ

ವಸಂತಕುಮಾರ್ ಬಿ
ಬೇಲೂರು: ಎತ್ತಿನಹೊಳೆ ನೀರಾವರಿ ಯೋಜನೆಯಡಿ ತಾಲೂಕಿನ ಸನ್ಯಾಸಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಉತ್ಪತ್ತಿನಹಳ್ಳಿಯ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಬುಧವಾರ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಿದರು.

ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ಸನ್ಯಾಸಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಅಭಿವೃದ್ಧಿಗೆ ಈಗಾಗಲೇ 4 ರಿಂದ 5 ಕೋಟಿ ರೂ. ಅನುದಾನದಲ್ಲಿ ಹಲವು ಕಾಮಗಾರಿ ಕೈಗೊಳ್ಳಲಾಗಿದೆ. ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಸಾರ್ವಜನಿಕರಿಗೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅಲ್ಲದೆ ಈ ಗ್ರಾಮದ ಮೂಲಕ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿವೆ. ಗ್ರಾಮೀಣ ಪ್ರದೇಶಗಳ ಸಂಪರ್ಕ ರಸ್ತೆ ಸುಗಮವಾಗಬೇಕು. ಸಾರ್ವಜನಿಕರಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂಬ ನಿಟ್ಟಿನ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಇದೀಗ ಎತ್ತಿನಹೊಳೆ ನೀರಾವರಿ ಯೋಜನೆಯ ಅನುದಾನದಡಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಹಳೇ ಉತ್ಪತ್ತಿನಹಳ್ಳಿ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಜತೆಗೆ ಗ್ರಾಮಗಳ ನಡುವಿನ ಸಂಪರ್ಕ ಸುಧಾರಿಸಿದರೆ ವಿದ್ಯಾರ್ಥಿಗಳು, ರೈತರು, ಕಾರ್ಮಿಕರು, ವ್ಯಾಪಾರಸ್ಥರಿಗೆ ಹೆಚ್ಚಿನ ಅನುಕೂಲವಾಗಲಿದೆ. ಆದ್ದರಿಂದ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಲಭ್ಯವಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅಗತ್ಯವಿರುವ ಕಡೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಗ್ರಾಮದ ಪುಟ್ಟರಾಜು ಮಾತನಾಡಿದರು. ಹಳೆ ಉತ್ಪತ್ತನಹಳ್ಳಿ ಗ್ರಾಮದ ನಾಗರಾಜು, ಮಂಜುನಾಥ್, ರವಿ ಸೇರಿದಂತೆ ಇತರರಿದ್ದರು.