ಚಿಕ್ಕಬಳ್ಳಾಪುರ: ದೊಡ್ಡಪೈಲಗುರ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ (ಬೆಂಗಳೂರು&ಹೈದರಾಬಾದ್) ಲಾರಿ ಹಾಗೂ ಆಂಧ್ರ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಆಂಧ್ರಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾಲಕ ಲಕ್ಷ್ಮಣ್ (52) ಹಾಗೂ ಪ್ರಯಾಣಿಕ ಬೆಂಗಳೂರಿನ ಕಲ್ಯಾಣ ನಗರದ ಉಮಾಕಾಂತ್ ರಾವ್ (77) ಮೃತರು.
ಆಂಧ್ರದ ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಲಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಾಲಕ ಸೀಟಿನಲ್ಲೇ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್ ಮುಂಭಾಗವನ್ನು ಎಳೆದು ಮೃತದೇಹ ಹೊರ ತೆಗೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಸಂಚಾರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.