ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಈಶ್ವರ್ ಖಂಡ್ರೆ 
ರಾಜ್ಯ

ಕೆಲವೆಡೆ ವರ್ಷವೀಡಿ ನೀರಿನ ಸಮಸ್ಯೆ

ಬೆಂಗಳೂರು: ಎಲ್‌ನಿನೋ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಕೊರತೆ ಆಗಿದ್ದು, ಕೆಲವು ಕಡೆಗಳಲ್ಲಿ ಇಡೀ ವರ್ಷ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಈಶ್ವರ್ ಖಂಡ್ರೆ ಆತಂಕ ವ್ಯಕ್ತಪಡಿಸಿದ್ದಾರೆ.
ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುಂಗಡವಾಗಿ 117 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈಗಾಗಲೇ 85 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲಾಗಿದೆ. 30 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಗಳ ಒಳಗಾಗಿ ಪರಿಹರಿಸುವಂತೆ ಸೂಚಿಸಲಾಗಿದೆ. ಖಾಸಗಿ ತೆರೆದ ಬಾವಿ, ಬೋರ್‌ವೆಲ್ಗಳಿಂದ ನೀರು ಪಡೆದು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಅಗತ್ಯವಿದ್ದ ಸಂದರ್ಭದಲ್ಲಿ ಮಾತ್ರ ಕೊಳವೆ ಬಾವಿ ಕೊರೆಸಲಾಗುತ್ತಿದೆ ಎಂದರು.
ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 2-3 ದಿನದಿಂದ ಮಳೆ ಆಗುತ್ತಿದ್ದು, ಕೆಲವು ಜಲಾಶಯಗಳಿಗೆ ನೀರು ಹರಿದುಬರುತ್ತಿದೆ. ಈ ಸಂಕಷ್ಟದ ಸಮಯದಲ್ಲಿ ಜೀವಜಲವನ್ನು ಹಿತಮಿತವಾಗಿ ಜನರು ಬಳಸಬೇಕು. ಪಂಚಾಯಿತಿಗಳು ನೀರು ಸೋರಿಕೆ ಆಗದಂತೆ ಎಚ್ಚರಿಕೆವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.