D.K. Shivakumar | ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ದಿನಕಳೆದಂತೆ ಹೆಚ್ಚಾಗುತ್ತಿದ್ದು, ಇದು ಕಾಂಗ್ರೆಸ್ ವರಿಷ್ಠರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದಿಲ್ಲಿಗೆ ಕರೆದು ಚರ್ಚೆ ಮಾಡುತ್ತೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬಗ್ಗೆ ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹೈಕಮಾಂಡ್ ನಾಯಕರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆದರೆ ನಾವಿಬ್ಬರು ಚರ್ಚಿಸಿ ದೆಹಲಿಗೆ ಹೋಗುತ್ತೇವೆ ಎಂದರು. ಇದೇ ಪ್ರಶ್ನೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೂ ಕೇಳಿದ್ದು, ನಮ್ಮ ನಾಯಕರು ಕರೆದರೆ ಹೋಗುತ್ತೇನೆ, ಹೈ ಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷರು ಹೇಳಿದ್ದೇನು..?
ಇಂದು ಅಧಿಕಾರ ಹಂಚಿಕೆಯ ಕುರಿತಾದ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿಗೆ ತೆರಳಿದ ಬಳಿಕ ರಾಹುಲ್ ಗಾಂಧಿ ಸೇರಿದಂತೆ ಕೆಲ ನಾಯಕರೊಂದಿಗೆ ಚರ್ಚಿಸಲಿದ್ದೇನೆ, ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಕೂಡ ಹಾಜರಿರಲಿದ್ದಾರೆ ಎಂದಿದ್ದರು.