ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 
ರಾಜ್ಯ

ನಾಗೇಂದ್ರ ರಾಜೀನಾಮೆವರೆಗೂ ಸದನ ನಡೆಸಲು ಬಿಡಲ್ಲ

ಗೋವಿಂದರಾಜು ಚಿನ್ನಕುರ್ಚಿ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ಆರೋಪಿ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವವರೆಗೂ ವಿಧಾನ ಮಂಡಲ ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ಬಿಜೆಪಿ ನಾಯಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂ. ಲೂಟಿ ಮಾಡಿದ್ದ ಕಾರಣಕ್ಕೆ ನಾಗೇಂದ್ರ ಅವರ ರಾಜೀನಾಮೆ ಪಡೆಯಲಾಗಿತ್ತು. ಸಿಬಿಐ, ಇಡಿ ಮತ್ತು ಸಿಐಡಿ ಅಧಿಕಾರಿಗಳು ನಾಗೇಂದ್ರ ವಿರುದ್ಧ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಇದೀಗ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಅನಿವಾರ್ಯತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಏನಿತ್ತು? ಕಾಂಗ್ರೆಸ್ ಹೈಕಮಾಂಡ್ ಒತ್ತಡ ಏನಾದರೂ ಇತ್ತೆ? ಎಂದು ಕೇಳಿದರು.
186 ಕೋಟಿ ರೂ. ಹಗರಣ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಹ ಒಪ್ಪಿಕೊಂಡಿದ್ದರು. ಲೂಟಿ ಮಾಡಿದ ಹಣವನ್ನು ನಕಲಿ ಬ್ಯಾಂಕ್ ಖಾತೆಗೆ ಜಮೆ ಮಾಡಿ ತೆಲಂಗಾಣ ವಿಧಾನಸಭಾ ಚುನಾವಣೆಗೆ ಬಳಸಿದ್ದರು. ಅಮಾಯಕ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡರು ಎಂದು ದೂರಿದರು.
ಇಷ್ಟೆಲ್ಲ ಆದರೂ ಮತ್ತೆ ನಾಗೇಂದ್ರಗೆ ಸಚಿವ ಸ್ಥಾನ ಕೊಡುವುದು ಅಕ್ಷಮ್ಯ ಅಪರಾಧ. ಸದನ ಆರಂಭವಾಗುವ ಮೊದಲು ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡಬೇಕು. ಇಲ್ಲವಾದರೆ ರಾಜೀನಾಮೆ ಪಡೆಯುವವರೆಗೆ ಸದನದ ಹೊರಗೆ ಮತ್ತು ಒಳಗೆ ಜೆಡಿಎಸ್ ಜತೆ ಸೇರಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.