ನಂಜನಗೂಡಿನ ಸರ್ಕಾರಿ ನಾಗಮ್ಮ ಶಾಲಾ ಆವರಣದಲ್ಲಿ ಮೈಸೂರು ಜಿಲ್ಲಾ ಪೊಲೀಸ್, ನಂಜನಗೂಡು ಉಪ ವಿಭಾಗ, ಸಂಚಾರ ಪೊಲೀಸ್ ಠಾಣೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾಕ್ಕೆ ಮೈಸೂರು ಎಸ್ ಪಿ ಮಲ್ಲಿಕಾರ್ಜುನ ಬಾಲದಂಡೆ ಚಾಲನೆ ನೀಡಿದರು. ಚಿತ್ರದಲ್ಲಿ ಡಿವೈಎಸ್‌ಪಿ ರಘು, ಇನ್‌ಸ್ಪೆಕ್ಟರ್ ರವೀಂದ್ರ ಸೇರಿದಂತೆ ಶಾಲಾ ಮಕ್ಕಳನ್ನು ಕಾಣಬಹುದು. 
ರಾಜ್ಯ

ಅಪಘಾತಗಳಿಂದ ರಕ್ಷಣೆ ಪಡೆಯಲು ಹೆಲ್ಮೆಟ್ ಧರಿಸಿ

ನಂಜನಗೂಡು: ಪೋಲಿಸಿನವರಿಂದ ದಂಡ ತಪ್ಪಿಸಲು ಮಾತ್ರ ಹೆಲ್ಮೆಟ್ ಹಾಕಬೇಕು ಎನ್ನುವುದು ತಪ್ಪು. ಅಪಘಾತಗಳಿಂದ ತಲೆಗೆ ಪೆಟ್ಟಾಗದಂತೆ ರಕ್ಷಣೆ ಪಡೆಯಲು ಹೆಲ್ಮೆಟ್ ಧರಿಸಿ ಪ್ರಾಣ ರಕ್ಷಿಸಿಕೊಳ್ಳಿ ಎಂದು ಮೈಸೂರು ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.
ನಗರದ ಸರ್ಕಾರಿ ನಾಗಮ್ಮ ಶಾಲಾ ಆವರಣದಲ್ಲಿ ಶುಕ್ರವಾರ ಮೈಸೂರು ಜಿಲ್ಲಾ ಪೊಲೀಸ್, ನಂಜನಗೂಡು ಉಪ ವಿಭಾಗ, ಸಂಚಾರ ಪೊಲೀಸ್ ಠಾಣೆ ನಂಜನಗೂಡು ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಷ್ಟ್ರೀಯ ರಸ್ತೆ ಸುರಕ್ಷತೆ ಮತ್ತು ಮಾಸಾಚರಣೆ ಅಂಗವಾಗಿ ಮೈಸೂರು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಶಾಲಾ- ಕಾಲೇಜಿನ ವಿದ್ಯಾರ್ಥಿಗಳ ಮೂಲಕ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದ್ದು, ಹೆಲ್ಮೆಟ್ ಧರಿಸದೆ ಪ್ರಯಾಣ ಮಾಡುವುದು, ವಾಹನಚಾಲನೆ ಮಾಡುವಾಗ ಮೊಬೈಲ್ ಉಪಯೋಗಿಸುವುದು, ಹೀಗೆ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡುಬರುತ್ತದೆ. ಸಾಕಷ್ಟು ಜನರು ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಮತ್ತು ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಪ್ರತಿನಿತ್ಯ ಸಾಕಷ್ಟು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಾವು ಜಾಗೃತಿ ಮೂಡಿಸಬೇಕಾಗಿದೆ ಎಂದರು.
ನಗರದ ಜೆಎಸ್‌ಎಸ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಎಎಸ್‌ಪಿ ಮಲ್ಲಿಕ್ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯ ಎಲ್ಲ ಕಡೆ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಈಗಾಗಲೇ ಸಂಚಾರಿ ನಿಯಮಗಳನ್ನು ಪಾಲಿಸದ ವಾಹನ ಸವಾರರಿಗೆ 30 ಲಕ್ಷ ರೂ.ವರೆಗೂ ದಂಡ ವಿಧಿಸಲಾಗಿದೆ. ಅಪಘಾತ ಪ್ರಕರಣಗಳನ್ನು ತಡೆಗಟ್ಟಬೇಕು. ಸಿಸಿ ಕ್ಯಾಮೆರಾ ಮತ್ತು ಪೊಲೀಸ್ ಇದ್ದಾರೆ ಎಂದು ಹೆಲ್ಮೆಟ್ ಹಾಕುವುದಲ್ಲ. ನಮ್ಮ ಜೀವವನ್ನು ಕಾಪಾಡಿಕೊಳ್ಳಲು ಹೆಲ್ಮೆಟ್ ಧರಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಈಗಾಗಲೇ ಜಿಲ್ಲೆಯಲ್ಲಿ 400 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇತ್ತಿಚಿನ ದಿನಗಳಲ್ಲಿ ಅಪಘಾತದಲ್ಲಿ ಸಾವಿನ ಪ್ರಮಾಣ ಏರಿಕೆಯಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ಬೈಕ್ ಕೊಡಬಾರದು. ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಪತ್ರಕರ್ತರಿಗೆ ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ವಿತರಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಸಾರ್ವಜನಿಕರಿಗೆ ಜಾಥಾ ಮೂಲಕ ಅರಿವು ಮೂಡಿಸಿ ಕೆಲ ದ್ವಿಚಕ್ರ ವಾಹನ ಸವಾರರಿಗೂ ಹೆಲ್ಮೆಟ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಡಿವೈಎಸ್ಪಿ ರಘು, ಪಟ್ಟಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಿ.ಎಂ.ರವೀಂದ್ರ, ಜೆಎಸ್‌ಎಸ್ ಕಾಲೇಜಿನ ಪ್ರಾಂಶುಪಾಲ ಹೊನ್ನೇಗೌಡ, ಶಿವಕುಮಾರ್, ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಕೃಷ್ಣಕಾಂತ ಕೋಳಿ, ಹುಲ್ಲಹಳ್ಳಿ ಪೊಲೀಸ್ ಠಾಣೆ ಪಿಎಸ್‌ಐ ಚೇತನ್ ಕುಮಾರ್, ಎಸ್.ಬಿ ತಿಮ್ಮಯ್ಯ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.