ಹೈಕಮಾಂಡ್ ಕೊಟ್ಟ ಆಫರ್ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ: ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಹೇಳಿದ್ದಿಷ್ಟು...Siddaramaiah
- ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ತಮ್ಮ ಮುಂದಿನ ರಾಜಕೀಯ ಭವಿಷ್ಯದ ಕುರಿತು ಸಿದ್ದರಾಮಯ್ಯ ಮಾತು
- ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಅಹಿಂದ ನಾಯಕ
- ಕಾಂಗ್ರೆಸ್ ಹೈಕಮಾಂಡ್ ನೀಡಿದ್ದ ರಾಜ್ಯಸಭೆ ಪ್ರವೇಶದ ಆಫರ್ ತಿರಸ್ಕರಿಸಿದ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ತಮ್ಮ ಮುಂದಿನ ರಾಜಕೀಯ ಭವಿಷ್ಯದ ಕುರಿತು ಹರಿದಾಡುತ್ತಿದ್ದ ಎಲ್ಲಾ ಊಹಾಪೋಹಗಳಿಗೆ ಸಿದ್ದರಾಮಯ್ಯ ( Siddaramaiah ) ಅವರು ತೆರೆ ಎಳೆದಿದ್ದಾರೆ.
ಇಂದು ನಡೆದ ಮಹತ್ವದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ನಂತರ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಲಿದ್ದಾರೆ ಎಂಬ ಚರ್ಚೆಗಳ ನಡುವೆ, ತಮಗೆ ದೆಹಲಿ ಮಟ್ಟದಲ್ಲಿ ಸಿಗಲಿದ್ದ ದೊಡ್ಡ ಅವಕಾಶವನ್ನು ನಿರಾಕರಿಸಿರುವುದಾಗಿ ಅವರು ಬಹಿರಂಗಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್‌ನವರು ನನ್ನನ್ನು ದೆಹಲಿಗೆ ಬರುವಂತೆ ಆಹ್ವಾನಿಸಿ, ರಾಜ್ಯಸಭೆಗೆ ಕರೆದಿದ್ದರು. ಆದರೆ ನಾನು ರಾಜ್ಯಸಭೆಗೆ ಹೋಗಲ್ಲ ಎಂದು ಸ್ಪಷ್ಟವಾಗಿ ನಿರಾಕರಿಸಿದ್ದೇನೆ. ನಾನು ಕರ್ನಾಟಕದಲ್ಲೇ ಉಳಿದು, ಸಕ್ರಿಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ದೃಢವಾಗಿ ಹೇಳಿದ್ದಾರೆ. ಈ ಮೂಲಕ ತಾವು ಸದಾ ರಾಜ್ಯದ ಜನತೆ ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ನೆಲದ ರಾಜಕಾರಣದಲ್ಲೇ ತೊಡಗಿಸಿಕೊಳ್ಳುವುದಾಗಿ ಸಿಎಂ ಸಾರಿದ್ದಾರೆ.
ಸ್ವಇಚ್ಛೆಯಿಂದ ರಾಜೀನಾಮೆ
ಇದೇ ವೇಳೆ ತಮ್ಮ ರಾಜೀನಾಮೆಯ ಹಿಂದೆ ಹೈಕಮಾಂಡ್‌ನ ಬಲವಂತ ಅಥವಾ ಒತ್ತಡವಿತ್ತೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್‌ನಿಂದ ತಮಗೆ ಯಾವುದೇ ರೀತಿಯ ಒತ್ತಡ ಇರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನನ್ನ ಮೇಲೆ ಯಾವುದೇ ಹೈಕಮಾಂಡ್ ಒತ್ತಡ ಇರಲಿಲ್ಲ. ನನ್ನ ಸ್ವಇಚ್ಛೆಯಿಂದಲೇ ನಾನು ಈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ ಎಂದು ಹೇಳುವ ಮೂಲಕ ಪಕ್ಷದ ಒಳಗೆ ಎಲ್ಲವೂ ಸೌಹಾರ್ದಯುತವಾಗಿದೆ ಎಂಬುದನ್ನು ಸಾಬೀತುಪಡಿಸಲು ಪ್ರಯತ್ನಿಸಿದರು.
ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah ) ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ತೀವ್ರ ರಾಜಕೀಯ ಚರ್ಚೆ ಹಾಗೂ ವದಂತಿಗಳಿಗೆ ತೆರೆ ಎಳೆದಿರುವ ಸಿದ್ದರಾಮಯ್ಯ, ಇಂದು ರಾಜಭವನಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಆದರೆ, ರಾಜೀನಾಮೆ ಸಲ್ಲಿಕೆಯ ಈ ಮಹತ್ವದ ಕ್ಷಣದಲ್ಲಿ ರಾಜಪಾಲರು ಸ್ಥಳದಲ್ಲಿ ಲಭ್ಯವಿಲ್ಲದ ಕಾರಣ, ಸಿಎಂ ತಮ್ಮ ಪತ್ರವನ್ನು ರಾಜ್ಯಪಾಲರ ಅನುಪಸ್ಥಿತಿಯಲ್ಲೇ ಅವರ ವಿಶೇಷ ಕಾರ್ಯದರ್ಶಿಗೆ (ಸೆಕ್ರೆಟರಿ) ಸಲ್ಲಿಕೆ ಮಾಡಿದ್ದಾರೆ.
ಸದ್ಯ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ತಲುಪಿಸಿದ್ದಾರಾದರೂ, ತಾಂತ್ರಿಕವಾಗಿ ಸಿಎಂ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಸಾಂವಿಧಾನಿಕ ನಿಯಮಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಈ ಪತ್ರವನ್ನು ಪರಿಶೀಲಿಸಿ, ಅಂಗೀಕರಿಸುವವರೆಗೂ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಪೂರ್ಣಗೊಳ್ಳುವುದಿಲ್ಲ. ರಾಜ್ಯಪಾಲರು ಈ ಪತ್ರವನ್ನು ಅಧಿಕೃತವಾಗಿ ಸ್ವೀಕರಿಸಿ, ಅಂಗೀಕಾರದ ಮುದ್ರೆ ಒತ್ತಿದ ನಂತರವಷ್ಟೇ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಅಥವಾ ಮುಂದಿನ ಪರ್ಯಾಯ ರಾಜಕೀಯ ವ್ಯವಸ್ಥೆಯ ಅಧಿಕೃತ ಪ್ರಕ್ರಿಯೆಗಳು ಆರಂಭವಾಗಲಿವೆ.