ಕೊಳ್ಳೇಗಾಲ: ಪಟ್ಟಣದ ಶ್ರೀ ವೆಂಕಟೇಶ್ವರ ಮಹಲ್‌ನಲ್ಲಿ ಮಂಗಳವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮತಗಳ್ಳತನ ವಿರುದ್ಧ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಜನ ಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಸಹಿ ಸಂಗ್ರಹ ಅಭಿಯಾನ ಮಂಗಳವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಚುನಾವಣೆ ಸಂದರ್ಭ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಕೈ ಬಿಟ್ಟು ಹೋದಾಗ ಅಧಿಕಾರಿಗಳನ್ನು ದೂರುವುದನ್ನು ನೋಡಿದ್ದೇವೆ. ಆದರೆ, ಹೆಸರು ಕೈಬಿಟ್ಟು ಹೋಗಲು ಕಾರಣ ಏನೆಂಬುದು ಗೊತ್ತಾಗುತ್ತಿರಲಿಲ್ಲ. ಅದರಂತೆ, ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಮತಗಳ್ಳತನ ಆಗಿರುವ ಬಗ್ಗೆ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷವೇ ಸಮಿತಿ ರಚಿಸಿ ಈ ಮತಗಳ್ಳತನವನ್ನು ಬಯಲು ಮಾಡಿದೆ. ರಾಹುಲ್ ಗಾಂಧಿ ಅವರ ವಿಚಾರವನ್ನು ಆಧರಿಸಿ ಓಟಿಪಿ ಮೂಲಕ ಮತದಾರರನ್ನು ನೊಂದಾಯಿಸಲು ಚುನಾವಣಾ ಆಯೋಗ ಮುಂದಾಗಿದೆ. ಗುಜರಾತ್, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲೂ ಮತಗಳ್ಳತನ ಪ್ರಕರಣ ನಡೆದಿದೆ. ಹಾಗಾಗಿ ಕಾಂಗ್ರೆಸ್ ದೇಶಾದ್ಯಂತ ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ರಾಜೇಂದ್ರ, ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ, ನಗರಸಭೆ ಅಧ್ಯಕ್ಷ ರೇಖಾ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್ ಹಾಗೂ ನಗರಸಭೆ ಸದಸ್ಯರು ಇದ್ದರು.