ಭದ್ರಾವತಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಮಾನವ ಸರಪಳಿ ನಿರ್ಮಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಿದರು. ತಹಸೀಲ್ದಾರ್ ನಾಗರಾಜ್, ತಾಪಂ ಇಒ ಗಂಗಣ್ಣ, ಬಿಇಒ ಎ.ಕೆ.ನಾಗೇಂದ್ರಪ್ಪ ಇದ್ದರು.  
ನ್ಯೂಸ್

ಸಂವಿಧಾನದ ಪ್ರತಿಜ್ಞಾ ವಿಧಿ ಸ್ವೀಕಾರ

ಭದ್ರಾವತಿ: ತಾಲೂಕು ಆಡಳಿತ, ಶಿಕ್ಷಣ, ಅರಣ್ಯ ಇಲಾಖೆ ಸೇರಿ ವಿವಿಧ ಇಲಾಖಾ ಅಧಿಕಾರಿಗಳು, ಶಾಲಾ ಮಕ್ಕಳ ಸಹಯೋಗದಲ್ಲಿ ಭಾನುವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.

ತಾಲೂಕಿನ ಗಡಿ ಗ್ರಾಮ ಕಾರೇಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಭಾರತದ ಸಂವಿಧಾನ ಆಶಯಗಳನ್ನು ಓದುವ ಮೂಲಕ ನಗರಸಭೆ ಸದಸ್ಯ ಬಿ.ಕೆ.ಮೋಹನ್ ಹಾಗೂ ತಹಸೀಲ್ದಾರ್ ಕೆ.ಆರ್.ನಾಗರಾಜ್ ಚಾಲನೆ ನೀಡಿದರು.
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಪಿಡಿಒಗಳು, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ನೂರಾರು ಸಂಖ್ಯೆಯಲ್ಲಿ ಸೇರಿ ಒಬ್ಬರಿಗೊಬ್ಬರು ಕೈಹಿಡಿದುಕೊಂಡು ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಗೌರವ ಸಲ್ಲಿಸಿದರು. ತಾಲೂಕಿನಲ್ಲಿ ತರೀಕೆರೆ ರಸ್ತೆಯ ಕಾರೇಹಳ್ಳಿ ಗ್ರಾಮದಿಂದ ಶಿವಮೊಗ್ಗ ಬಳಿಯ ಮಾಚೇನಹಳ್ಳಿಯವರೆಗೂ ಸುಮಾರು 26 ಕಿ.ಮೀ.ವರೆಗೆ ಮಾನವ ಸರಪಳಿ ನಿರ್ಮಿಸಲಾಗಿತ್ತು.
ಬಿಇಒ ಎ.ಕೆ.ನಾಗೇಂದ್ರಪ್ಪ ಪ್ರತಿಜ್ಞಾ ವಿಧಿ ಬೋಧಿಸಿದರು. ಉಪವಲಯ ಅರಣ್ಯಾಧಿಕಾರಿ ಆಶಿಶ್ ರೆಡ್ಡಿ, ಎಸಿಎಫ್ ರತ್ನಪ್ರಭಾ, ತಾಪಂ ಇಒ ಗಂಗಣ್ಣ ಸೇರಿ ಹಲವರು ಗಿಡ ನೆಟ್ಟರು. ಕಾರೇಹಳ್ಳಿ ಗ್ರಾಪಂ ಅಧ್ಯಕ್ಷೆ ರೂಪಶ್ರೀ, ಶಾಂತಾಬಾಯಿ, ಅಂಬಿಕಾ, ಡಿಎಸ್‌ಎಸ್ ಮುಖಂಡ ರಂಗನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್, ಉಪತಹಸೀಲ್ದಾರ್ ಮಂಜಾನಾಯ್ಕ, ರವಿಕುಮಾರ್, ಧರ್ಮ, ಪಂಚಾಕ್ಷರಪ್ಪ ಇದ್ದರು.