ನ್ಯೂಸ್

ಎಚ್​​ಡಿಕೆ ಆರೋಗ್ಯ ಚೇತರಿಕೆಗಾಗಿ ದೊಡ್ಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಟಿ.ಎ.ಶರವಣ

ಬೆಂಗಳೂರು: ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆಗಾಗಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಬಸವನಗುಡಿಯ ದೊಡ್ಡ ಗಣೇಶ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಶ್ರೀ. ಎಚ್. ಡಿ.ಕುಮಾರಸ್ವಾಮಿ ರವರು ಆರೋಗ್ಯದಲ್ಲಿ ಶೀಘ್ರ ಚೇತರಿಕೆಯಾಗಿ ಮತ್ತೆ ಜನಸೇವೆ ಮಾಡುವಂತಾಗಲಿ ಎಂದು ಇಂದು ಬಸವನಗುಡಿಯ ದೊಡ್ಡಗಣೇಶ ದೇವಾಲಯದಲ್ಲಿ ಕ್ಷೀರಾಭಿಷೇಕ ಮತ್ತು ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಲಘು ಪಾರ್ಶ್ವವಾಯುವಿಗೆ ಒಳಗಾಗಿದ್ದ ಕುಮಾರಸ್ವಾಮಿ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಎಚ್​​ಡಿಕೆ ಅವರನ್ನು ಗುರುವಾರ ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ತಮ್ಮ ತಂದೆ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. 'ವೈದ್ಯರ ಸಲಹೆಯಂತೆ ಅವರು ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುತ್ತಾರೆ. ನಂತರ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಗುರುವಾರ ಮಾಹಿತಿ ನೀಡಿದ್ದಾರೆ.