Dakshina Kannada: ಪ್ರವೀಣ್ ನೆಟ್ಟಾರು ಹತ್ಯೆ ನಂತರ ಮತ್ತೆ ಮಂಗಳೂರಿನಲ್ಲಿ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕಿಡಿಗೇಡಿಗಳ ಗ್ಯಾಂಗ್ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಸಮೀಪ ಸುಹಾಸ್ ಶೆಟ್ಟಿ ಮೇಲೆ ಏಕಾಏಕಿ ದಾಳಿ ನಡೆಸಿ, ಮಚ್ಚಿನಿಂದ ಕೊಲೆ ಮಾಡಲಾಗಿದೆ. ಈ ಘಟನೆ ಸಂಭವಿಸಿದ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಸುಹಾಸ್ ಶೆಟ್ಟಿ ಹತ್ಯೆಯಿಂದ ದಕ್ಷಿಣ ಕನ್ನಡದಲ್ಲಿ ಕುದಿಯುತ್ತಿದ್ದು, ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಈ ಘಟನೆ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್, "ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸುತ್ತೇವೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ, ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ ಮಾಡುತ್ತಿದ್ದೇವೆ" ಎಂದರು.
"ಎರಡೂ ಜಿಲ್ಲೆಗಳಲ್ಲಿ ಕೋಮು ವಿರೋಧಿ ಕಾರ್ಯಪಡೆಯನ್ನು ರಚಿಸುತ್ತಿದ್ದೇವೆ. ವಿಶೇಷವಾಗಿ ಎರಡೂ ಜಿಲ್ಲೆಯಲ್ಲಿಯೂ ಈ ಫೋರ್ಸ್ ಕಾರ್ಯನಿರ್ವಹಿಸಲಿದೆ. ಯಾರು ಇಂತಹ ಕೋಮುವಾದವನ್ನು ಬೆಂಬಲಿಸಿ, ಉತ್ತೇಜನ ನೀಡುತ್ತಾರೋ ಅಂಥವರ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸಲಾಗುವುದು" ಎಂದು ಎಚ್ಚರಿಕೆ ನೀಡಿದರು.
ಸುಹಾಸ್ ಶೆಟ್ಟಿ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಒಟ್ಟು 8 ಆರೋಪಿಗಳನ್ನು ಬಂಧಿಸಿದ್ದಾರೆ. 5 ತಂಡಗಳನ್ನು ರಚಿಸಿ ಆರೋಪಿಗಳ ಸೆರೆಗೆ ಬಲೆ ಬೀಸಿದ್ದ ಖಾಕಿ ಪಡೆ, 8 ಶಂಕಿತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತರನ್ನು ಅಬ್ದುಲ್ ಸಫ್ವಾನ್ (ಪ್ರಮುಖ ಆರೋಪಿ), ನಿಯಾಜ್, ಎಂಡಿ ಮುಜಾಮಿಲ್, ಕಲಂದರ್ ಶಫಿ, ಆದಿಲ್ ಮೆಹರೂಫ್, ನಾಗರಾಜ್, ಎಂಡಿ ರಿಜ್ವಾನ್ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ.